ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ

ಬೆಂಗಳೂರು: ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆ ಆಡಳಿತ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಶಾಸಕಾಂಗ ಅಧಿವೇಶನಕ್ಕೆ ಗೈರುಹಾಜರಾಗುವುದನ್ನು ಮುಂದುವರಿಸಿದರೆ ಆ ಸಚಿವರನ್ನು ತಮ್ಮ ಸಂಪುಟದಿಂದ ಕೈಬಿಡುವಂತೆ ಕೇಳಿಕೊಂಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೆಲವು ಸಚಿವರ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನವಾಗಬೇಕು ಎಂದು ಹಿರಿಯ ಶಾಸಕರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಸಭೆಯಲ್ಲಿ ಮಾತನಾಡಿದ ಶಾಸಕರು, ಅನಿವಾರ್ಯ ಕಾರಣಗಳ ಹೊರತಾಗಿ ಸಚಿವರು ಕಡ್ಡಾಯವಾಗಿ ಸದನದಲ್ಲಿ ಇರಬೇಕೆಂದು ಮುಖ್ಯಮಂತ್ರಿಗಳೇ ಸೂಚಿಸಿದ್ದರೂ, ಅನೇಕ ಸಚಿವರು ಇದನ್ನು ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಗ್ಯಾಸ್ ಬೆಲೆ ಏರಿಕೆಯ ವಿಷಯದಲ್ಲಿ ಬಿಜೆಪಿಯನ್ನು ಸದನದಲ್ಲಿ ತರಾಟೆಗೆ ತೆಗೆದುಕೊಳ್ಳುವಂತೆ ಶಾಸಕರಿಗೆ ಸೂಚಿಸಿದರು.
ಸಭೆಯು ಕೆಲವು ನಾಟಕೀಯ ಬೆಳವಣಿಗೆಗಳಿಗೂ ಸಾಕ್ಷಿಯಾಯಿತು. ಅಧಿಕಾರಿಗಳು ಜನಪ್ರತಿನಿಧಿಗಳ ಮಾತಿಗೆ ಬೆಲೆ ನೀಡುತ್ತಿಲ್ಲ ಎಂದು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ದೂರಿದರೆ, ಶೃಂಗೇರಿ ಶಾಸಕ ರಾಜೇಗೌಡ ಅವರು ಅಧಿಕಾರಿಗಳ ಪರವಾಗಿ ಮಾತನಾಡಿದರು.
ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ನಾರಾಯಣಸ್ವಾಮಿ ಅವರು ಸಭೆಯಿಂದ ಹೊರನಡೆದರು. ಇದೇ ವೇಳೆ ಬೆಂಗಳೂರಿನ ಶಾಸಕರು ಮುಂಬರುವ ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



