ರಾಜ್ಯ

ಅಕ್ರಮ ಮದ್ಯ ಮಾರಾಟ ವಿರುದ್ಧ ಸರ್ಕಾರ ಕ್ರಮ: ಕಾನೂನು ಬಿಗಿಗೊಳಿಸಲು ಮುಂದು, NDPS ಕಾಯ್ದೆಯಡಿ ಸೇರ್ಪಡೆಗೆ ಚಿಂತನೆ..!

ಕರ್ನಾಟಕ ಅಬಕಾರಿ ಕಾಯ್ದೆ 1965ಕ್ಕೆ ಹೊಸ ಸ್ವರೂಪ ನೀಡಿ, ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಗೆ ತರುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕುರಿತಂತೆಯೂ ಚಿಂತನೆ ನಡೆಸುತ್ತಿದೆ.

ಅಕ್ರಮ ಮದ್ಯ ಮಾರಾಟ ವಿರುದ್ಧ ಸರ್ಕಾರ ಕ್ರಮ: ಕಾನೂನು ಬಿಗಿಗೊಳಿಸಲು ಮುಂದು, NDPS ಕಾಯ್ದೆಯಡಿ ಸೇರ್ಪಡೆಗೆ ಚಿಂತನೆ..!
ಮದ್ಯ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ತಯಾರಿಕೆಯನ್ನು ಸಂಪೂರ್ಣವಾಗಿ ಹತ್ತಿಕ್ಕಲು ರಾಜ್ಯ ಸರ್ಕಾರ ಕಠಿಣ ಹೆಜ್ಜೆ ಇರಿಸಲು ಮುಂದಾಗಿದೆ.

ಕರ್ನಾಟಕ ಅಬಕಾರಿ ಕಾಯ್ದೆ 1965ಕ್ಕೆ ಹೊಸ ಸ್ವರೂಪ ನೀಡಿ, ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೆ, ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಗೆ ತರುವ ಮೂಲಕ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕುರಿತಂತೆಯೂ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ,

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅಕ್ರಮ ಮದ್ಯದ ದಂಧೆಯ ಕುರಿತು ಕೇಳಿದ ಪ್ರಶ್ನೆಗೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಉತ್ತರಿಸಿದರು.

ಈ ವಿಷಯ ಪ್ರಸ್ತಾಪವಾಗುತ್ತಿದ್ದಂತೆ, ರಾಜ್ಯದಲ್ಲಿ ಅಕ್ರಮ ಮದ್ಯ ಉತ್ಪಾದನೆ ಮತ್ತು ಮಾರಾಟ ಹೆಚ್ಚುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ.ಪಿ. ಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಹೊಸ ಕಾನೂನು ರೂಪಿಸುವ ಕುರಿತು ಶಿಫಾರಸುಗಳನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಬಸನಗೌಡ ದದ್ದಲ್ ಅವರು ವಿಷಯ ಪ್ರಸ್ತಾಪಿಸಿ, ಗಡಿ ಪ್ರದೇಶಗಳಲ್ಲಿ ವಿಶೇಷವಾಗಿ ತೆಲಂಗಾಣ ಗಡಿಯಲ್ಲಿರುವ ಗ್ರಾಮಗಳಲ್ಲಿ—ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ. ಕಿರಾಣಿ ಅಂಗಡಿಗಳ ಮೂಲಕವೇ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿದರು.

ತೆಲಂಗಾಣದಿಂದ ಪೌಡರ್ ತರಿಸಿಕೊಂಡು ಇಲ್ಲಿ ಮದ್ಯ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಯುವಕರು ವ್ಯಸನಕ್ಕೆ ಒಳಗಾಗಿ ಅಪರಾಧಗಳಲ್ಲಿ ತೊಡಗುತ್ತಿದ್ದಾರೆ. ಇದನ್ನು ತಡೆಯಲು ಕಠಿಣ ಕ್ರಮ ಅಗತ್ಯ ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ತಿಮ್ಮಾಪುರ, ಕೆಲವು ಮಂದಿ ಸೈನಿಕ ಕ್ಯಾಂಟೀನ್‌ಗಳಿಂದ ಮದ್ಯ ತರಿಸಿಕೊಂಡು ಗ್ರಾಮಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಒಂದು ಕಡೆ ಹೊಸ ಅಂಗಡಿಗಳನ್ನು ತೆರೆಯಲು ಒತ್ತಡವಿದ್ದು, ಇನ್ನೊಂದು ಕಡೆ ಅಕ್ರಮ ಮಾರಾಟವೂ ಹೆಚ್ಚುತ್ತಿದೆ ಎಂದು ಹೇಳಿದರು.

ಇದೇ ವೇಳೆ ‘ಸಿಎಚ್ ಪೌಡರ್’ ಎಂಬ ಅಪಾಯಕಾರಿ ಪದಾರ್ಥದ ಬಳಕೆಯ ಕುರಿತಂತೆ ಸಚಿವರು ಕಳವಳ ವ್ಯಕ್ತಪಡಿಸಿದರು.

ಇದು ಅಲ್ಪ ಪ್ರಮಾಣದಲ್ಲೇ ದೊಡ್ಡ ಪ್ರಮಾಣದ ಅಕ್ರಮ ಮದ್ಯ ತಯಾರಿಸಲು ಬಳಸಲಾಗುತ್ತದೆ. ಈ ಪದಾರ್ಥದ ಮಾರಾಟವನ್ನು ಆಂಧ್ರಪ್ರದೇಶದಲ್ಲಿ ಕಾನೂನುಬದ್ಧವಾಗಿ ನಡೆಯುತ್ತಿದೆ ಎಂಬುದನ್ನೂ ಅವರು ಉಲ್ಲೇಖಿಸಿದರು.

ಈ ಹಿನ್ನೆಲೆಯಲ್ಲಿ ಇಂತಹ ಪದಾರ್ಥಗಳನ್ನು ಸಹ NDPS ಕಾಯ್ದೆಯಡಿ ತರಲು ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಲಿದೆ. ಅಗತ್ಯವಿದ್ದರೆ ರಾಜ್ಯ ಮಟ್ಟದಲ್ಲೇ ಹೊಸ ಕಾನೂನು ತರಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಅಬಕಾರಿ ಇಲಾಖೆ ಮತ್ತು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಕೃಷ್ಣನ್ ಸಮಿತಿಯ ವರದಿ ಬಂದ ನಂತರ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.