News wrap 23-03-2026 | ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ; Digital Arrest: ವೃದ್ಧ ಉದ್ಯಮಿಗೆ 15 ಕೋಟಿ ರೂ ವಂಚನೆ; ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್ ಪೂರೈಕೆ

1. ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಸೋಮವಾರ ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಅವರ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮುಗಿದ ಬಳಿಕ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಮಾವೇಶದಲ್ಲಿ CM ಸಿದ್ದರಾಮಯ್ಯ, DCM ಡಿ. ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
2. ದಾವಣಗೆರೆ: ಟಿಕೆಟ್ ವಿಚಾರವಾಗಿ ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನ- ಸಿಎಂ ಪ್ರತಿಕ್ರಿಯೆ ಏನು?
ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಸೋಮವಾರ ನಾಮಪತ್ರ ಸಲ್ಲಿಸಿದರು. ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ ಉಂಟಾಗಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಲಾಗುವುದು, ಅಸಮಾಧಾನ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
3. ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್ ಪೂರೈಕೆ
ರಾಜ್ಯದಲ್ಲಿ ಉಂಟಾದ ತೀವ್ರ ಎಲ್‌ಪಿಜಿ ಕೊರತೆ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆದಾರರು ತಮ್ಮ ಸಾಮಾನ್ಯ ಬಳಕೆಯ ಕೇವಲ ಶೇ.20ರಷ್ಟು ಗ್ಯಾಸ್‌ನಲ್ಲೇ ಕಾರ್ಯಾಚರಣೆ ನಡೆಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸೋಮವಾರ ಸೂಚನೆ ನೀಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಈಗ ಪ್ರತಿದಿನ ಸುಮಾರು 16,000 ವಾಣಿಜ್ಯ ಸಿಲಿಂಡರ್‌ಗಳನ್ನು ಮಾತ್ರ ಸರಬರಾಜು ಮಾಡಲಾಗುತ್ತಿದೆ. ಹಿಂದೆ ದಿನಕ್ಕೆ ಸುಮಾರು 45,000 ಸಿಲಿಂಡರ್ ಬಳಕೆಯಾಗುತ್ತಿತ್ತು. ಆದ್ದರಿಂದ ಲಭ್ಯವಿರುವ ಸೀಮಿತ ಸಂಪನ್ಮೂಲಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು. ಈ ಹೊಸ ವ್ಯವಸ್ಥೆಯಡಿಯಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕ್ಯಾಂಟೀನ್‌ಗಳು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಎಲ್ಲಾ ವಾಣಿಜ್ಯ ಬಳಕೆದಾರರು, ಮುಖ್ಯವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ ಗೇಲ್ ಕಂಪನಿಯೊಂದಿಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಇಲ್ಲದಿದ್ದರೆ ಸಿಲಿಂಡರ್ ವಿತರಣೆ ಕಷ್ಟವಾಗಲಿದೆ. ಈ ಕ್ರಮದಿಂದ ಕಪ್ಪು ಮಾರುಕಟ್ಟೆಯನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.
4. ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ .ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
5. Digital Arrest: ವೃದ್ಧ ಉದ್ಯಮಿಗೆ 15 ಕೋಟಿ ರೂ ವಂಚನೆ
ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಗುರಿಯಾಗಿಸಿಕೊಂಡು 15 ಕೋಟಿ ರೂಪಾಯಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ. ತಿಲಕವಾಡಿಯ ಅಗರ್ಕರ್ ರಸ್ತೆಯ ನಿವಾಸಿಯಾಗಿರುವ ಸಂತ್ರಸ್ತ ವ್ಯಕ್ತಿಗೆ ಫೆಬ್ರವರಿ 5 ರಂದು ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಎಂದು ಹೇಳಿಕೊಂಡ ವ್ಯಕ್ತಿಗಳಿಂದ ವಾಟ್ಸಾಪ್ ಕರೆ ಬಂದಿತ್ತು, ಉದ್ಯಮಿಯ ಹೆಸರಿನಲ್ಲಿ ನೋಂದಾಯಿಸಲಾದ ಸಿಮ್ ಕಾರ್ಡ್‌ಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಎಂದು ಬೆದರಿಸಿದ್ದಾರೆ. ಫೆಬ್ರವರಿ 7 ಮತ್ತು ಮಾರ್ಚ್ 9 ರ ನಡುವೆ ಅವರು ಮತ್ತೆ ಸಂತ್ರಸ್ತ ವ್ಯಕ್ತಿಯನ್ನು ಸಂಪರ್ಕಿಸಿ, ಹಣವನ್ನು ಹಲವು ಬಾರಿ ವರ್ಗಾಯಿಸಲು ಒತ್ತಾಯಿಸಿ, ಅಂತಿಮವಾಗಿ 15.45 ಕೋಟಿ ರೂ.ಗಳನ್ನು ವಂಚಿಸಿದ್ದಾರೆ. ಮಾರ್ಚ್ 18 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಂಚಕರ ಖಾತೆಗಳನ್ನು ಫ್ರೀಜ್ ಮಾಡಿದ್ದು, 15 ಕೋಟಿಯಲ್ಲಿ 90 ಲಕ್ಷ ರೂ. ಇರುವ ಖಾತೆಯನ್ನು ತಡೆಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


