Heavy Rain: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!
ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದ ಕೆಲವು ದಿನಗಳಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ರಣ ಬಿಸಿಲಿನಿಂದ ತತ್ತರಿಸಿದ ಜನತೆಗೆ ಕೊಂಚ ತಂಪೆರೆದಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಒಟ್ಟು 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ ಅಬ್ಬರಿಸಲಿದೆ. ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈ ವೇಳೆ ಗಂಟೆಗೆ ಸುಮಾರು 30 ರಿಂದ 40 ಕಿ. ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸದ್ಯಕ್ಕೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 6 ರಂದು ಈ ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್: ನಾಳೆ ದಕ್ಷಿಣ ಒಳನಾಡಿನ ಜೊತೆಗೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೂ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 7 ರಂದು ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್: ಇನ್ನೂ ಮೇ 7 ರಂದು ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಬಹುಪಾಲು ಎಲ್ಲಾ ಜಿಲ್ಲೆಗಳಿಗೂ ಹಳದಿ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಉಡುಪಿ ಜಿಲ್ಲೆಗೂ ಅಲರ್ಟ್ ವಿಸ್ತರಣೆಯಾಗಿದೆ. ರಾಜ್ಯದಾದ್ಯಂತ ವ್ಯಾಪಕವಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ಇದೆ. ಜನರು ಮಳೆಯ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿರಲು ಸೂಚಿಸಲಾಗಿದೆ.
ಮೇ 8 ರಂದು ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಮುನ್ನೆಚ್ಚರಿಕೆ ಮುಂದುವರಿದಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಮತ್ತು ಬಿರುಗಾಳಿ ಮುಂದುವರಿಯಲಿದೆ.
ಮೇ 15ರ ಸುಮಾರಿಗೆ ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನ ತಲುಪಲಿದೆ. ಅಲ್ಲಿಂದ ಕೇರಳಕ್ಕೆ ಬಂದು ನಂತರ ಕರ್ನಾಟಕಕ್ಕೆ ಪ್ರವೇಶ ಮಾಡಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಮುಂಗಾರು ಪ್ರವೇಶ ಮಾಡುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



