ಸಚಿವ ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ, 3 ದಿನ ರಾಜ್ಯಾದ್ಯಂತ ಸಂತಾಪ; ಸರ್ಕಾರ ಆದೇಶ
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.

ಬೆಂಗಳೂರು: ಸಚಿವ ಡಿ ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು, ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಸೋಮವಾರ (ಮೇ 11) ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ 3 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನೂ ಘೋಷಿಸಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆ ಸರ್ಕಾರ ಸಂತಾಪ ಸೂಚಿಸಿ ಅಧಿಸೂಚನೆ ಹೊರಡಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದಂತೆ ಮೇ 11 ರಂದು ಸೋಮವಾರ, ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ಸೇರಿದಂತೆ) ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಮೇ 10 ರಿಂದ 12 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ.
ನಾಳೆ ಸಂಜೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ಈ ನಡುವೆ ಸದಾಶಿವ ನಗರದ ನಿವಾಸದಲ್ಲಿ ಸಚಿವ ಡಿ.ಸುಧಾಕರ್ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ನಾಳೆ ಚಳ್ಳಕೆರೆಯಲ್ಲಿ ಸಂಜೆ 4.00 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದ್ದು, ನಾನು ಸಹ ಭಾಗಿಯಾಗುತ್ತೇನೆಂದ ಹೇಳಿದ್ದಾರೆ.
ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ಬಹುದೊಡ್ಡ ನಷ್ಟವುಂಟಾಗಿದೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದು, ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸುಧಾಕರ್ ಅವರು ಮೂಲತಃ ಚಳ್ಳಕರೆಯವರು. 2008ರಿಂದ ಹಿರಿಯೂರು ಶಾಸಕರಾಗಿದ್ದರು. ಎರಡನೇ ಬಾರಿಗೆ ಮಂತ್ರಿಯಾಗಿದ್ದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ಸಾಕಷ್ಟು ಕೊಡುಗೆ ನೀಡಿರುವ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಸುಧಾಕರ್ ಅವರ ಚಿಕ್ಕಪ್ಪ ಜಯಣ್ಣ ಕೂಡಾ ಶಾಸಕರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದರು. ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು, ರೈತರ ಹಾಗೂ ಬಡವರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಬಡವರ ಬಂಧು ಎಂದೇ ಖ್ಯಾತರಾಗಿದ್ದರು.
ಸುಧಾಕರ್ ಅವರು ಪತ್ನಿ, ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.
ನಾಳೆ ಚಳ್ಳಕೆರೆಯಲ್ಲಿ ಸಂಜೆ 4.00 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದ್ದು, ನಾನು ಸಹ ಭಾಗಿಯಾಗುತ್ತೇನೆ. ಸುಧಾಕರ್ ಅವರ ಮತಕ್ಷೇತ್ರ ಹಿರಿಯೂರಿನಲ್ಲಿ ಅವರ ಪಾರ್ಥಿವ ಶರೀರವನ್ನು ದರ್ಶನಕ್ಕಾಗಿ ಇರಿಸಲಿದ್ದು, ನಾಳೆ ಚಳ್ಳಕೆರೆಗೆ ಕರೆದೊಯ್ಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



