ಎಬೋಲಾ ಭೀತಿ: WHO ಅಲರ್ಟ್ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ; ವಿಮಾನ ನಿಲ್ದಾಣಗಳಲ್ಲಿ ತೀವ್ರ ನಿಗಾ ಇಡುವಂತೆ ಆರೋಗ್ಯ ಇಲಾಖೆ ಸೂಚನೆ
ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಇಲಾಖೆಯು, ಅಂತರರಾಷ್ಟ್ರೀಯ ಪ್ರಯಾಣ ಮತ್ತು ವ್ಯಾಪಾರ ವಹಿವಾಟುಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಾದ್ಯಂತ ಕಣ್ಗಾವಲು ಹಾಗೂ ನಿಗಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ.

ಬೆಂಗಳೂರು: ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ಉಗಾಂಡಾದಲ್ಲಿ ಎಬೋಲಾ (Ebola) ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು (WHO) ಮೇ 17 ರಂದು ಇದನ್ನು 'ಅಂತರರಾಷ್ಟ್ರೀಯ ಕಳಕಳಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ' ಎಂದು ಘೋಷಿಸಿದೆ.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯಾದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದ್ದು, ಸಾರ್ವಜನಿಕ ಸಲಹಾ ಮಾರ್ಗಸೂಚಿಯನ್ನು ಹೊರಡಿಸಿದೆ.
ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಇಲಾಖೆಯು, ಅಂತರರಾಷ್ಟ್ರೀಯ ಪ್ರಯಾಣ ಮತ್ತು ವ್ಯಾಪಾರ ವಹಿವಾಟುಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಾದ್ಯಂತ ಕಣ್ಗಾವಲು ಹಾಗೂ ನಿಗಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ತಿಳಿಸಿದೆ.
ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದಡಿ (IDSP) ಶಂಕಿತ ಪ್ರಕರಣಗಳ ಮೇಲಿನ ನಿಗಾವನ್ನು ಹೆಚ್ಚಿಸಲಾಗಿದೆ. ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರನ್ನು ಗುರುತಿಸಲು ಮತ್ತು ಅವರ ಆರೋಗ್ಯದ ಮೇಲೆ ನಿಗಾ ಇಡಲು ವಿಮಾನ ನಿಲ್ದಾಣಗಳು ಹಾಗೂ ಇತರ ಪ್ರವೇಶ ದ್ವಾರಗಳೊಂದಿಗೆ (PoEs) ಸಮನ್ವಯತೆಯನ್ನು ಬಲಪಡಿಸಲಾಗಿದೆ.
ರಾಜ್ಯಾದ್ಯಂತ ತ್ವರಿತ ಪ್ರತಿಕ್ರಿಯೆ ತಂಡಗಳನ್ನು ಹೈ ಅಲರ್ಟ್‌ನಲ್ಲಿ ಇಡಲಾಗಿದ್ದು, ಆಸ್ಪತ್ರೆಗಳಲ್ಲಿ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ. ಶಂಕಿತ ಪ್ರಕರಣಗಳನ್ನು ನಿಭಾಯಿಸಲು ಆರೋಗ್ಯ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತಿದ್ದು, ವೈಯಕ್ತಿಕ ರಕ್ಷಣಾ ಸಾಧನಗಳು (PPE ಕಿಟ್‌ಗಳು), ಅಗತ್ಯ ಔಷಧಗಳು ಮತ್ತು ಪ್ರಯೋಗಾಲಯದ ವ್ಯವಸ್ಥೆಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನ ರಾಜೀವ್ ಗಾಂಧಿ ಎದೆಯೋಗಗಳ ಸಂಸ್ಥೆಯನ್ನು (RGICD) ಪ್ರತ್ಯೇಕ ವಾರ್ಡ್ (Isolation Centre) ಆಗಿ ಮತ್ತು ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯನ್ನು ಕ್ವಾರಂಟೈನ್ ಹಾಗೂ ಚಿಕಿತ್ಸಾ ಕೇಂದ್ರವಾಗಿ ನಿಯೋಜಿಸಲಾಗಿದೆ.
ಮಂಗಳೂರಿನಲ್ಲಿ ಶ್ರೀನಿವಾಸ್ ಪೋರ್ಟ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಐಸೊಲೇಷನ್ ಮತ್ತು ಚಿಕಿತ್ಸಾ ಸೌಲಭ್ಯಕ್ಕಾಗಿ ಗುರುತಿಸಲಾಗಿದೆ.
ಶಂಕಿತ ರೋಗಿಗಳನ್ನು ನಿಯೋಜಿತ ಆಸ್ಪತ್ರೆಗಳಿಗೆ ಸುರಕ್ಷಿತವಾಗಿ ಸಾಗಿಸಲು ಪ್ರತ್ಯೇಕ ಆಂಬ್ಯುಲೆನ್ಸ್ ಸೇವೆಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಶಂಕಿತರಿಂದ ಸಂಗ್ರಹಿಸಲಾದ ಮಾದರಿಗಳನ್ನು (Samples) ಬೆಂಗಳೂರಿನ ಎನ್‌ಐವಿ (NIV) ಮೂಲಕ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (National Institute of Virology) ಅಂತಿಮ ದೃಢೀಕರಣ ಪರೀಕ್ಷೆಗಾಗಿ ಕಳುಹಿಸಲಾಗುವುದು.
ಎಬೋಲಾ ಪೀಡಿತ ದೇಶಗಳಿಂದ ಹಿಂದಿರುಗುವ ಪ್ರಯಾಣಿಕರು ಕಡ್ಡಾಯವಾಗಿ 21 ದಿನಗಳ ಕಾಲ ತಮ್ಮ ಆರೋಗ್ಯದ ಮೇಲೆ ನಿಗಾ ಇಡಬೇಕು. ಒಂದು ವೇಳೆ ಜ್ವರ, ವಾಂತಿ, ಭೇದಿ ಅಥವಾ ಅತಿಯಾದ ಸುಸ್ತು ಕಾಣಿಸಿಕೊಂಡರೆ ತಕ್ಷಣವೇ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



