ಇನ್ನು ಮುಂದೆ ಕೆಲವರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ
ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಹಾಗೂ ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರದ ಎಸ್ಐಆರ್ (SIR) ವಿಶೇಷ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಅನಗತ್ಯವಾಗಿ ಯೋಜನೆಗಳ ಲಾಭ ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಯೋಜನೆಯಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಮಾಡುವುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಣವು ಮೃತಪಟ್ಟವರ ಹೆಸರಿನಲ್ಲಿಯೂ ಸಂದಾಯವಾಗುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ.
ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳು
ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಇದು ಸರಕಾರಿ ಹಣದ ದುರುಪಯೋಗಕ್ಕೆ ಕಾರಣವಾಗುತ್ತಿದೆ. ಅಲ್ಲದೆ, ತೆರಿಗೆ ಪಾವತಿಸುವವರು ಕೂಡ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಯೋಜನೆಗಳ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವುದಾಗಿದ್ದು, ಹೀಗಾಗಿ ತೆರಿಗೆ ಪಾವತಿಸುವವರನ್ನು ಈ ವ್ಯಾಪ್ತಿಯಿಂದ ಹೊರಗಿಡಲು ಚಿಂತನೆ ನಡೆಸಲಾಗಿದೆ. ಇದಲ್ಲದೆ, ಒಂದೇ ಮನೆಯಲ್ಲಿ ಇಬ್ಬಿಬ್ಬರಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಅಕ್ರಮಗಳು ಸಹ ಬೆಳಕಿಗೆ ಬಂದಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ
ಈ ಎಲ್ಲಾ ಅಕ್ರಮಗಳನ್ನು ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಮಗ್ರ ಪರಿಶೀಲನೆಗೆ ಚಿಂತನೆ ನಡೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




