ರಾಜ್ಯ

ಬೆಂಗಳೂರಿನ ಖಾಸಗಿ ಆಸ್ಪತ್ರೆ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಆರೋಪ; ಮಹಿಳೆ ದೂರಿನ ಮೇರೆಗೆ ಎಫ್‌ಐಆರ್ ದಾಖಲು

ಸರ್ಜಾಪುರ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಮೇ 21 ರಂದು ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಆರೋಪ; ಮಹಿಳೆ ದೂರಿನ ಮೇರೆಗೆ ಎಫ್‌ಐಆರ್ ದಾಖಲು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಪುರುಷ ಸಿಬ್ಬಂದಿಯೊಬ್ಬರು ಶೌಚಾಲಯದೊಳಗೆ ತನ್ನ ಫೋಟೊ ತೆಗೆಯಲು ಅಥವಾ ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸಿದ್ದಾರೆ ಎಂದು 36 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸರ್ಜಾಪುರ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಮೇ 21 ರಂದು ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಹಿಳೆ ತನ್ನ ದೂರಿನಲ್ಲಿ, ಶೌಚಾಲಯ ಬಳಸುತ್ತಿದ್ದಾಗ ಪುರುಷ ಸಿಬ್ಬಂದಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಮತ್ತು ಅವರ ಮೊಬೈಲ್ ಫೋನ್ ಬಳಸಿ ಫೋಟೊ ಅಥವಾ ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿರುವುದಾಗಿ ಆರೋಪಿಸಿದ್ದಾರೆ.

ತಾವು ಶೌಚಾಲಯದ ಒಳಗಿರುವಾಗ ಆತ ತನ್ನ ಫೋಟೊ ಅಥವಾ ವಿಡಿಯೋಗಳನ್ನು ಸೆರೆಹಿಡಿದಿರಬಹುದು ಎಂಬ ಗಂಭೀರ ಅನುಮಾನ ಮೂಡಿರುವುದಾಗಿ ಮಹಿಳೆ ಹೇಳಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕೆ ತಕ್ಷಣ ಆತನನ್ನು ಈ ಬಗ್ಗೆ ಪ್ರಶ್ನಿಸಿದಾಗ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ತಾನು ಗರ್ಭಿಣಿಯಾಗಿದ್ದರಿಂದ ಈ ಘಟನೆ ತನಗೆ ತೀವ್ರ ಮಾನಸಿಕ ಒತ್ತಡ, ಭಯ ಮತ್ತು ಅವಮಾನವನ್ನುಂಟು ಮಾಡಿದೆ. ಹೀಗಾಗಿ, ಆರೋಪಿ ಮತ್ತು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಹಿಳೆ ದೂರು ಸಲ್ಲಿಸಿದ್ದಾರೆ.

ದೂರಿನ ಆಧಾರದ ಮೇಲೆ, ಆರೋಪಿ ಮತ್ತು ಆಸ್ಪತ್ರೆಯ ಆಡಳಿತ ಮಂಡಳಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 77 (voyeurism), 79 (ಮಹಿಳೆಯ ಘನತೆಯನ್ನು ಅವಮಾನಿಸುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ) ಮತ್ತು 62 (ಅಪರಾಧಗಳನ್ನು ಮಾಡಲು ಪ್ರಯತ್ನ) ಅಡಿಯಲ್ಲಿ ವರ್ತೂರು ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಜೊತೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಮೊಬೈಲ್ ಫೋನ್‌ನಲ್ಲಿ ಅಂತಹ ಯಾವುದೇ ಫೋಟೊಗಳು ಅಥವಾ ವಿಡಿಯೋಗಳು ಕಂಡುಬಂದಿಲ್ಲ  ಎಂದು ಅವರು ಹೇಳಿದರು.

‘ಈ ಸಂಬಂಧ ನಾವು ಆರೋಪಿ ಮತ್ತು ಆಸ್ಪತ್ರೆ ಆಡಳಿತ ಮಂಡಳಿಗೆ ನೋಟಿಸ್ ನೀಡಿದ್ದೇವೆ. ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.