ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ: Yellow ಅಲರ್ಟ್ ಘೋಷಿಸಿದ IMD..!
ನಗರದಲ್ಲಿ ಸೋಮವಾರದವರೆಗೆ ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಮೋಡ ಕವಿದು ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ಭಾರತ ಹವಾಮಾನ ಇಲಾಖೆ (IMD) ಮೇ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ನಗರದಲ್ಲಿ ವಾರಪೂರ್ತಿ ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಐಎಂಡಿ ಮಾಹಿತಿ ಪ್ರಕಾರ, ಬಂಗಾಳಕೊಲ್ಲಿಯ ನೈಋತ್ಯ ಮತ್ತು ಪಕ್ಕದ ಪ್ರದೇಶಗಳಲ್ಲಿ ಮೇಲ್ಮುಖ ವಾಯು ಚಂಡಮಾರುತದ ಪ್ರಸರಣ ಉಂಟಾಗುವುದರಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಈ ಹವಾಮಾನ ವ್ಯವಸ್ಥೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನಗರದಲ್ಲಿ ಸೋಮವಾರದವರೆಗೆ ಬೆಳಗ್ಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಮೋಡ ಕವಿದು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಕೆಲ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದಾಗಿ ಇಲಾಖೆ ಎಚ್ಚರಿಸಿದೆ.
ನಗರದ ಗರಿಷ್ಠ ತಾಪಮಾನ ಸುಮಾರು 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ಇರಲಿದೆ ಎಂದು ಅಂದಾಜಿಸಲಾಗಿದೆ. ಕಳೆದ ವಾರ 34 ಡಿಗ್ರಿವರೆಗೆ ಏರಿಕೆಯಾಗಿದ್ದ ತಾಪಮಾನ ಇದೀಗ 30 ಡಿಗ್ರಿಗಿಂತ ಕೆಳಗೆ ಇಳಿದಿರುವುದು ಗಮನಾರ್ಹ.
ಭಾನುವಾರ ಬೆಳಗ್ಗೆ ದಾಖಲಾಗಿರುವ ಹವಾಮಾನ ಅಂಕಿಅಂಶಗಳ ಪ್ರಕಾರ, ಕರ್ನಾಟಕದ ಅನೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಕುಸಿತ ಕಂಡುಬಂದಿದೆ.
ಇದೇ ವೇಳೆ, ಬಿಹಾರ ದಕ್ಷಿಣ ಭಾಗದಿಂದ ಆಂಧ್ರಪ್ರದೇಶದ ಉತ್ತರ ಕರಾವಳಿವರೆಗೆ ಜಾರ್ಖಂಡ್ ಮತ್ತು ಒಡಿಶಾ ಮೂಲಕ ಹಾದುಹೋಗಿರುವ ಉತ್ತರ-ದಕ್ಷಿಣ ತಗ್ಗು ಪ್ರದೇಶ (North-South Trough) ಕೂಡ ರಾಜ್ಯದ ಮಳೆಯ ಚಟುವಟಿಕೆಗೆ ಕಾರಣವಾಗಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಮಾತ್ರವಲ್ಲದೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೂ ಮೇ 29ರವರೆಗೆ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ ಹವಾಮಾನ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



