ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: SIT ಹೊಸ ತನಿಖೆ ಆರಂಭ
ಎಸ್‌ಐಟಿ ಮುಖ್ಯಸ್ಥರೂ ಆಗಿರುವ ಪೊಲೀಸ್ ಮಹಾನಿರೀಕ್ಷಕ (IGP) ಎನ್. ಶಶಿಕುಮಾರ್ ಮಂಗಳೂರಿನ ಹಳೆಯ ಡಿಸಿ ಕಚೇರಿ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಚೇರಿಯಲ್ಲಿ ಸಭೆ ನಡೆಸಿದರು.

ಮಂಗಳೂರು: 2012ರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (SIT) ಇಂದು ಗುರುವಾರ ಅಧಿಕೃತವಾಗಿ ತನಿಖೆ ಆರಂಭಿಸಿದೆ. ಎಸ್‌ಐಟಿ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಸಭೆ ನಡೆಸಿದರು.
ಎಸ್‌ಐಟಿ ಮುಖ್ಯಸ್ಥರೂ ಆಗಿರುವ ಪೊಲೀಸ್ ಮಹಾನಿರೀಕ್ಷಕ (IGP) ಎನ್. ಶಶಿಕುಮಾರ್ ಮಂಗಳೂರಿನ ಹಳೆಯ ಡಿಸಿ ಕಚೇರಿ ಕಟ್ಟಡದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಎಸ್‌ಐಟಿ ಸದಸ್ಯರಾದ ಸಿಎಚ್. ಸುಧೀರ್ ಕುಮಾರ್ ರೆಡ್ಡಿ, ಡಿಐಜಿ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರು, ಬೆಂಗಳೂರು ಗುಪ್ತಚರ ವಿಭಾಗದ ಎಸ್‌ಪಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಎಸ್‌ಪಿ ಲೋಕೇಶ್ ಜಗಲಾಸರ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ಸಭೆಗೆ ಹಾಜರಾಗಿರಲಿಲ್ಲ. ಅವರು ತನಿಖಾ ತಂಡದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಸ್‌ಐಟಿ ಅಧಿಕಾರಿಗಳು ಚರ್ಚಿಸಿದರು.
ತನಿಖೆಗೆ ಅನುಕೂಲವಾಗುವಂತೆ ಮಂಗಳೂರಿನ ಹಳೆಯ ಡಿಸಿ ಕಚೇರಿ ಕಟ್ಟಡದ ಎರಡನೇ ಮಹಡಿಯಲ್ಲಿ ಎಸ್‌ಐಟಿಗಾಗಿ ಪ್ರತ್ಯೇಕ ಕಚೇರಿ ಸ್ಥಾಪಿಸಲಾಗಿದೆ. ಬೆಳ್ತಂಗಡಿಯಲ್ಲೂ ಎಸ್‌ಐಟಿಗೆ ಕಚೇರಿ ಸ್ಥಾಪಿಸಲಾಗುತ್ತಿದ್ದು, ಅಧಿಕಾರಿಗಳು ಅಲ್ಲಿಗೂ ಭೇಟಿ ನೀಡಿ ಪರಿಶೀಲಿಸಿದರು.
ಅಪರಾಧ ನಡೆದ ಸುಮಾರು 14 ವರ್ಷಗಳ ಬಳಿಕ, ಮೊನ್ನೆ ಸೆಪ್ಟೆಂಬರ್ 21ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 17 ವರ್ಷದ ಸೌಜನ್ಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಅಲ್ಲದೆ, ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ಮೂರು ತಿಂಗಳೊಳಗೆ ಅನುಸರಣಾ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.
ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ, 2012ರ ಅಕ್ಟೋಬರ್ 9ರಂದು ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ನಾಪತ್ತೆಯಾಗಿದ್ದರು. ಮರುದಿನ ಧರ್ಮಸ್ಥಳದ ನೇತ್ರಾವತಿ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಸೌಜನ್ಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಹತ್ಯೆ ಮಾಡಿರುವುದು ದೃಢಪಟ್ಟಿತ್ತು.
ಈ ಪ್ರಕರಣದ ಕುರಿತು ಕರ್ನಾಟಕ ಅಪರಾಧ ತನಿಖಾ ಇಲಾಖೆ (CID) ಹಾಗೂ ಕೇಂದ್ರ ತನಿಖಾ ದಳ (CBI) ಈ ಹಿಂದೆ ತನಿಖೆ ನಡೆಸಿದ್ದರೂ, ಕೃತ್ಯಕ್ಕೆ ಹೊಣೆಗಾರರನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಪ್ರಕರಣದ ಏಕೈಕ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು 2023ರ ಜೂನ್‌ನಲ್ಲಿ ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



