ರಾಜ್ಯ

ಬೆಳಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ ನಿರ್ಮಾಣ- ಸಿಎಂ ಘೋಷಣೆ!

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಪಾಲ್ಗೊಂಡರು.

ಬೆಳಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ ನಿರ್ಮಾಣ- ಸಿಎಂ ಘೋಷಣೆ!
ಸಿಎಂ ಡಿಕೆ ಶಿವಕುಮಾರ್ ಮತ್ತಿತರರು
Published On :

ಬೆಂಗಳೂರು: ಬೆಳೆಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಬೃಹತ್ ಗಾಂಧೀಜಿ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವೊಡೇ ಪಿ. ಕೃಷ್ಣ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಬೆಳಗಾವಿಯಲ್ಲಿ ಗಾಂಧೀಜಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧಿವೇಶನ ನಡೆದು ನೂರು ವರ್ಷವಾದ ನೆನಪಿಗೆ ಅಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಸ್ಮಾರಕ ನಿರ್ಮಿಸಲಾಗುವುದು ಎಂದರು.

ಸ್ಮಾರಕ ನಿರ್ಮಿಸುವ ಕುರಿತು ಮುಂದಿನ ವರ್ಷದ ಆಯವ್ಯಯದಲ್ಲಿ ಅನುದಾನ ಘೋಷಿಸಲಾಗುವುದು. ಗಾಂಧಿ ಭೇಟಿ ನೀಡಿದ ಎಲ್ಲ ಜಿಲ್ಲೆಗಳಲ್ಲಿ ಸ್ಮಾರಕ ಸ್ತಂಭಗಳ ನಿರ್ಮಾಣವನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಅದಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಗಾಂಧೀಜಿಯನ್ನು ಒಪ್ಪಿದ ಕುಟುಂಬ ಮತ್ತು ಒಪ್ಪದೆ ಕೊಂದ ಕುಟುಂಬದ ನಡುವೆ ಸಂಘರ್ಷಗಳು ನಡೆಯುತ್ತಿವೆ. ಗಾಂಧೀಜಿಯ ಹೆಸರು ಮತ್ತು ತತ್ವವನ್ನು ಅಳಿಸುವವರ ನಡುವೆ ನಮ್ಮ ಸರ್ಕಾರ ಉಳಿಸುವ ಕೆಲಸ ಮಾಡುತ್ತದೆ ಎಂದರು.

ಗಾಂಧೀ ಸತ್ತಾಗ ವಿಶ್ವಸಂಸ್ಥೆಯ ಕಟ್ಟಡದ ಮೇಲೆ ಎಲ್ಲ ರಾಷ್ಟ್ರಗಳ ಧ್ವಜವನ್ನು ಇಳಿಸಿ ಗೌರವ ಕೊಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಿಂದ ಗಾಂಧೀಜಿ ಹೆಸರನ್ನು ಯಾಕೆ ತೆಗೆಯಿತು ಎಂಬುದು ಅರ್ಥವಾಗಿಲ್ಲ. ಈಗ ಈ ಯೋಜನೆಗೆ ವಿಬಿಜಿ ರಾಮ್ ಜಿ ಹೆಸರು ಬಂದಿದೆ. ಈ ಬಗ್ಗೆ ಚರ್ಚೆ ಆಗಬೇಕಾಗಿದೆ ಎಂದು ಹೇಳಿದರು.

ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಮಾತನಾಡಿ, ಗಾಂಧೀ ತತ್ವವನ್ನು ಕಡೆಗಣಿಸುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿವೆ. ಆದರೆ ಅದು ಈ ಜಗತ್ತು ಇರುವವರೆಗೂ ಸಾಧ್ಯವಿಲ್ಲ. ಗಾಂಧೀಜಿಯವರ ಅಹಿಂಸಾ ತತ್ವಕ್ಕೆ ಪರ್ಯಾಯವೇ ಇಲ್ಲ ಎಂದರು.

ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ, ಗಾಂಧೀ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗಾಂಧೀ ಮ್ಯೂಸಿಯಂನ್ನು ಮುಖ್ಯಮಂತ್ರಿ ಲೋಕಾರ್ಪಣೆಗೊಳಿಸಿದರು. ಕೊಪ್ಪಳ ಜಿಲ್ಲೆಯ ವ್ಯಸನ ಮುಕ್ತ ಗ್ರಾಮಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.