ರಾಜ್ಯ

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಭೀತಿ..!

ಕಳೆದ ಒಂಬತ್ತು ವರ್ಷಗಳಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ಕೇವಲ 1,500 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ.

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಭೀತಿ..!
ಆಶಾ ಕಾರ್ಯಕರ್ತೆಯರು
Published On :

ಬೆಂಗಳೂರು: ಗೌರವಧನ ಹೆಚ್ಚಳ, ಪ್ರೋತ್ಸಾಹಧನವನ್ನು ಸಕಾಲದಲ್ಲಿ ಪಾವತಿಸುವುದು ಹಾಗೂ ಆ್ಯಪ್ ಆಧಾರಿತ ಕೆಲಸದಿಂದ ಎದುರಾಗುತ್ತಿರುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು (ಆಶಾ) ಸೋಮವಾರದಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಜಂಟಿ ಆಶಾ ಕಾರ್ಯಕರ್ತೆಯರ ಸಂಘ ಕರೆ ನೀಡಿರುವ ಪ್ರತಿಭಟನೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ಕೇವಲ 1,500 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ನೀಡುವ ಗೌರವಧನ ಹಾಗೂ ಕೇಂದ್ರ ಸರ್ಕಾರದಿಂದ ದೊರೆಯುವ ಪ್ರೋತ್ಸಾಹಧನ ಸೇರಿದಂತೆ ಒಟ್ಟು ಮಾಸಿಕ ಪಾವತಿಯನ್ನು ಕನಿಷ್ಠ 15,000 ರೂಪಾಯಿಗೆ ನಿಗದಿಪಡಿಸಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇದೇ ವೇಳೆ ಗೌರವಧನ ಹಾಗೂ ಪ್ರೋತ್ಸಾಹಧನ ಪಾವತಿಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆಯೂ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಸಮಸ್ತ’ ಆ್ಯಪ್‌ ಬಳಕೆಗೆ ಮೊಬೈಲ್‌ ಫೋನ್‌ಗಳನ್ನು ಒದಗಿಸದೆ ತಮ್ಮ ಮೇಲೆ ಒತ್ತಡ ಹೇರಲಾಗುತ್ತಿದೆ. ಆ್ಯಪ್‌ ಬಳಸುತ್ತಿರುವವರಿಗೆ ತಾಂತ್ರಿಕ ದೋಷಗಳು ಹಾಗೂ ಸರ್ವರ್‌ ಸಮಸ್ಯೆಗಳು ಎದುರಾಗುತ್ತಿವೆ. ಜತೆಗೆ, ಭೌತಿಕ ದಾಖಲೆಗಳೊಂದಿಗೆ ಡಿಜಿಟಲ್ ದಾಖಲೆಗಳನ್ನೂ ನಿರ್ವಹಿಸಬೇಕಾಗಿರುವುದರಿಂದ ಹೆಚ್ಚುವರಿ ಸಮಯ ವ್ಯಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಬಾಕಿ ಇರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಪ್ರತಿ ತಿಂಗಳು ಗೌರವಧನ ಮತ್ತು ಇತರ ಪಾವತಿಗಳನ್ನು ಸಕಾಲದಲ್ಲಿ ಮಾಡಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಶೀಘ್ರ ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.