ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ; ಕೊಲೆ ಶಂಕೆ
ಮೃತರನ್ನು ಅರಕಲಗೂಡು ತಾಲೂಕಿನ ಹಿರೇಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಎಂದು ಗುರುತಿಸಲಾಗಿದ್ದು, ಅವರು ಪತಿ ಜತೆ ಗ್ರಾಮದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನ: 67 ವರ್ಷದ ವೃದ್ಧೆಯೊಬ್ಬರ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಹೆಮಾವತಿ ಕಾಲುವೆಗೆ ಎಸೆದಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ಅರಕಲಗೂಡು ತಾಲೂಕಿನ ಹಿರೇಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಎಂದು ಗುರುತಿಸಲಾಗಿದ್ದು, ಅವರು ಪತಿ ಜತೆ ಗ್ರಾಮದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಅ.3ರಂದು ಯಾವುದೋ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದ ಲಕ್ಷ್ಮಮ್ಮ ವಾಪಸ್ ಮನೆಗೆ ಬಂದಿರಲಿಲ್ಲ.
ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದ ವೇಳೆ, ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಮೀಪದ ಹೆಮಾವತಿ ಕಾಲುವೆಯಲ್ಲಿ ಮಂಗಳವಾರ ಸಂಜೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ಶವ ಪತ್ತೆಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಶವವನ್ನು ಹೊರತೆಗೆದು, ಗುರುತು ಪತ್ತೆಹಚ್ಚಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
ಕೊಲೆ ಮಾಡಿ ಶವ ಎಸೆದಿರುವ ಶಂಕೆ
ಪ್ರಾಥಮಿಕ ತನಿಖೆಯಲ್ಲಿ ಲಕ್ಷ್ಮಮ್ಮ ಅವರನ್ನು ಕೊಲೆ ಮಾಡಿ ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಕಾಲುವೆಗೆ ಎಸೆದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಕ್ಷ್ಮಮ್ಮ ಮನೆಯಿಂದ ಹೊರಟ ಬಳಿಕ ಎಲ್ಲಿಗೆ ತೆರಳಿದ್ದರು?, ಯಾರನ್ನು ಭೇಟಿಯಾಗಿದ್ದರು? ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಜೊತೆಗೆ, ಚಿನ್ನಾಭರಣ ದೋಚುವ ಉದ್ದೇಶದಿಂದ ಕೊಲೆ ನಡೆದಿದೆಯೇ? ಅಥವಾ ಮಹಿಳೆಗೆ ಪರಿಚಯವಿದ್ದವರೇ ಕೃತ್ಯದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಕೊಲೆಯ ನಿಖರ ಕಾರಣ ಹಾಗೂ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆಯ ನಂತರವಷ್ಟೇ ತಿಳಿದುಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



