ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್; ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ
ವಿನಯ್ ಕುಲಕರ್ಣಿಗೆ ನೀಡಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ವಿನಯ್ ಕುಲಕರ್ಣಿಗೆ ನೀಡಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡಿ, ಜಾಮೀನು ಮಂಜೂರು ಮಾಡಿರುವ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.
ಸಿಬಿಐ ಮತ್ತು ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಅವರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರಿದ್ದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿದೆ.
ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು, ಅಪರೂಪದ ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ವಾದಿಸಿದರು. ಈ ಸಂಬಂಧ ಸುಪ್ರೀಂ ಕೋರ್ಟ್‌ನ ಮೂರು ತೀರ್ಪುಗಳನ್ನು ಉಲ್ಲೇಖಿಸಿದರು. ಸಾರ್ವಜನಿಕ ಸೇವಕರಾಗಿರುವ ವ್ಯಕ್ತಿಗಳಿಗೆ ಸಹಜವಾಗಿ ಶಿಕ್ಷೆಗೆ ತಡೆಯಾಜ್ಞೆ ನೀಡಬಾರದು ಎಂಬ ವಾದಿಸಿದರು.
ಈ ಹಿಂದೆ ಸಾಕ್ಷ್ಯ ನಾಶಪಡಿಸಿದ ಆರೋಪದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು ಎಂದು ಸಿಬಿಐ ನ್ಯಾಯಾಲಯದ ಗಮನಕ್ಕೆ ತಂದಿತು. ಅಲ್ಲದೆ, ಹಿಂದಿನ ಎರಡು ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಹೈಕೋರ್ಟ್ ಮುಂದೆ ಬಹಿರಂಗಪಡಿಸಿಲ್ಲ ಎಂದೂ ಸಿಬಿಐ ವಾದಿಸಿತು.
ಈ ವೇಳೆ ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಎರಡು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಯಾರೂ ಓಡಿಹೋಗುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ, ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿತು. ಅಂದು ವಿಚಾರಣೆಯನ್ನು ಮುಂದೂಡುವುದಿಲ್ಲ ಎಂದು ಸಹ ಪೀಠ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



