ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ
ಹಂಸವಾಹಿನಿ ಅಲಂಕಾರದಲ್ಲಿ ನೇರಳೆ ಬಣ್ಣದ ಸೀರೆಯಿಂದ ಅಲಂಕರಿಸಲಾಗಿದ್ದ ದೇವಿಯ ವಿಗ್ರಹವನ್ನು ಚಾಮುಂಡಿ ಬೆಟ್ಟದ ದೇವಸ್ಥಾನದ ಪಕ್ಕದಲ್ಲಿರುವ ಬೆಳ್ಳಿಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿತ್ತು.

ಮೈಸೂರು: ಕೊಪ್ಪಳದ ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಇಂದು ಭಾನುವಾರ ಮಧ್ಯಾಹ್ನ 12.07ಕ್ಕೆ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಿಗೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ 2026ಕ್ಕೆ ಚಾಲನೆ ನೀಡಿದರು.
ಹಂಸವಾಹಿನಿ ಅಲಂಕಾರದಲ್ಲಿ ನೇರಳೆ ಬಣ್ಣದ ಸೀರೆಯಿಂದ ಅಲಂಕರಿಸಲಾಗಿದ್ದ ದೇವಿಯ ವಿಗ್ರಹವನ್ನು ಚಾಮುಂಡಿ ಬೆಟ್ಟದ ದೇವಸ್ಥಾನದ ಪಕ್ಕದಲ್ಲಿರುವ ಬೆಳ್ಳಿಯ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿತ್ತು.
ದಸರಾ ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿಯವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಮೊದಲ ಬಾರಿಗೆ ವಿವಿಧ ಮಠಗಳ 200ಕ್ಕೂ ಹೆಚ್ಚು ಮಠಾಧೀಶರು ಹಾಗೂ ಸಿಖ್ ಮತ್ತು ಟಿಬೆಟಿಯನ್ ಧಾರ್ಮಿಕ ಮುಖಂಡರು ಸೇರಿದಂತೆ ವಿವಿಧ ಧರ್ಮಗಳ ಮುಖ್ಯಸ್ಥರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇವರಿಗಾಗಿ ವಿಶೇಷ ಎತ್ತರದ ವೇದಿಕೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಿ ಗೌರವ ಸಲ್ಲಿಸಲಾಯಿತು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಸಚಿವ ರಿಜ್ವಾನ್ ಅರ್ಷದ್, ಮಾಜಿ ಸಚಿವರಾದ ಎಚ್.ಸಿ. ಮಹದೇವಪ್ಪ ಮತ್ತು ಕೆ. ವೆಂಕಟೇಶ್, ಶಾಸಕರಾದ ಜಿ.ಟಿ. ದೇವೇಗೌಡ, ಟಿ.ಎಸ್. ಶ್ರೀವತ್ಸ, ತನ್ವೀರ್ ಸೇಠ್, ರವಿಶಂಕರ್, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಕೆ. ಹರೀಶ್ ಗೌಡ, ಸಂಸದ ಸುನಿಲ್ ಬೋಸ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್ ಮತ್ತು ಸಿ.ಎನ್. ಮಂಜೇಗೌಡ ಉಪಸ್ಥಿತರಿದ್ದರು.
ಸುಮಾರು 2,000 ಮಂದಿ ದಸರಾ ಉದ್ಘಾಟನೆಯ ಭವ್ಯ ಸಮಾರಂಭಕ್ಕೆ ಸಾಕ್ಷಿಯಾದರು. ಇದಕ್ಕೂ ಮುನ್ನ ಗವಿಮಠದ ಸ್ವಾಮೀಜಿ ಹಾಗೂ ಪತ್ನಿಯೊಂದಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಂಗಳವಾದ್ಯಗಳ ನಾದದ ನಡುವೆ ಪೂಜಾ ಕುಣಿತ ಮತ್ತು ವೀರಗಾಸೆ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಅವರಿಗೆ ವಿಶೇಷ ಸ್ವಾಗತ ಕೋರಿದವು.
ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಐಶ್ವರ್ಯ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ, ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಶ್ರೀ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಉಕೇಶ್ ಕುಮಾರ್ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ತಾಯಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಹಾಗೂ ಸಿಎಂ ಡಿ ಕೆ ಶಿವಕುಮಾರ್ ಮೆಟ್ಟಿಲುಗಳಲ್ಲಿ ನಮಸ್ಕಾರ ಮಾಡಿದರು.
ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದರು. ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ಎಂ.ಬಿ. ಬೋರಲಿಂಗಯ್ಯ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು. ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




