ರಾಜ್ಯದಲ್ಲಿ ವ್ಯಾಪಕ ಬರ: ಅದ್ಧೂರಿ ದಸರಾ ಸಂಭ್ರಮಕ್ಕೆ ಮೈಸೂರು ಸಜ್ಜು; ಇಂದು ಚಾಲನೆ
ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಇಂದು ಭಾನುವಾರ ಶುಭ ಧನುರ್ ಲಗ್ನದಲ್ಲಿ ಬೆಳಗ್ಗೆ 11.50ರಿಂದ ಮಧ್ಯಾಹ್ನ 12.13ರ ನಡುವಿನ ಅವಧಿಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಭಾನುವಾರ ಚಾಲನೆ ದೊರೆಯಲಿದ್ದು, ಕಲೆ, ಸಂಸ್ಕೃತಿ, ಪರಂಪರೆ, ಭಕ್ತಿ ಮತ್ತು ಶೌರ್ಯದ ಅದ್ಭುತ ಸಂಗಮಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ.
ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತು ರೈತರ ಸಂಕಷ್ಟ ಮುಂದುವರಿದಿದ್ದರೂ, ಸಾಂಸ್ಕೃತಿಕ ನಗರಿ ಮೈಸೂರು ನಾಡಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಂಡಿದೆ. ಅರಮನೆ ನಗರಿಯು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇಡೀ ಮೈಸೂರು ನಗರವು ಝಗಮಗಿಸುತ್ತಿದೆ.
ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದಸರಾ ಉದ್ಘಾಟನೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಇಂದು ಭಾನುವಾರ ಶುಭ ಧನುರ್ ಲಗ್ನದಲ್ಲಿ ಬೆಳಗ್ಗೆ 11.50ರಿಂದ ಮಧ್ಯಾಹ್ನ 12.13ರ ನಡುವಿನ ಅವಧಿಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಇದಾದ ಬಳಿಕ ಸತತ 11 ದಿನಗಳ ಕಾಲ ನಗರದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿದ್ದು, ಮೈಸೂರು ಉತ್ಸವದ ಸಂಭ್ರಮದಲ್ಲಿ ಮಿಂದೇಳಲಿದೆ.
ಈ ಬಾರಿಯ ದಸರಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ದಸರಾ ಎಂಬ ಕಾರಣಕ್ಕೆ ವಿಶೇಷ ಮಹತ್ವ ಪಡೆದುಕೊಂಡಿದೆ. ಉತ್ಸವದ ಆಚರಣೆಯಲ್ಲಿ ವಿಶೇಷ ಆಸಕ್ತಿ ವಹಿಸಿರುವ ಅವರು, ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ಸರ್ಕಾರದ ಆಡಳಿತ ಯಂತ್ರವನ್ನು ಸಜ್ಜುಗೊಳಿಸಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ದಸರಾ ವೈಭವಕ್ಕೆ ಯಾವುದೇ ಕುಂದುಂಟಾಗಿಲ್ಲ. ನಗರವನ್ನು ವಿವಿಧ ಬಗೆಯ ಅಲಂಕಾರಗಳಿಂದ ಸಿಂಗರಿಸಲಾಗಿದ್ದು, ಪ್ರವಾಸಿಗರು ಮತ್ತು ಸಾರ್ವಜನಿಕರಿಗಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಇದೇ ವೇಳೆ, ಪರಿಸರ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಒಂದು ವರ್ಗದ ವಿರೋಧದ ನಡುವೆಯೂ ಕರಾವಳಿಯ ಸಾಂಪ್ರದಾಯಿಕ ಕೋಣ ಓಟದ ಸ್ಪರ್ಧೆಯಾದ ಕಂಬಳವನ್ನು ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿದೆ. ಅಕ್ಟೋಬರ್ 18 ಮತ್ತು 19ರಂದು ನಡೆಯಲಿರುವ ಈ ಸ್ಪರ್ಧೆಯಲ್ಲಿ ಸುಮಾರು 150ರಿಂದ 160 ಜೋಡಿ ಎಮ್ಮೆಗಳು ಭಾಗವಹಿಸುವ ನಿರೀಕ್ಷೆಯಿದೆ.
ಹೊರ ವರ್ತುಲ ರಸ್ತೆಯ ಸಾತಗಳ್ಳಿ ಸಮೀಪ ಎರಡು ದಿನಗಳ ಕಂಬಳ ಸ್ಪರ್ಧೆಗಾಗಿ 145 ಮೀಟರ್ ಉದ್ದದ ಟ್ರ್ಯಾಕ್ ನಿರ್ಮಿಸಲಾಗಿದೆ. ಈ ಕಾರ್ಯಕ್ರಮಕ್ಕಾಗಿ ಅಂದಾಜು 8 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


