ರಾಜ್ಯ

ಹಳ್ಳಿಗಳಿಂದ ಜನ ವಲಸೆ ತಡೆಯಲು ಜಾನುವಾರು, ಕೋಳಿ ಸಾಕಾಣಿಕೆ ಶೆಡ್‌ ನಿರ್ಮಾಣ: ಸರ್ಕಾರದಿಂದ ಉಪಾಯ

ಈ ಯೋಜನೆಯಡಿ ಹಳ್ಳಿಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ವಸಹಾಯ ಗುಂಪುಗಳಿಗೆ (SHG) ಸೇರಿದ ಜಮೀನುಗಳಲ್ಲಿ ಜಾನುವಾರು ಸಾಕಾಣಿಕೆ ಶೆಡ್‌ಗಳನ್ನು ನಿರ್ಮಿಸಲಾಗುತ್ತದೆ

ಹಳ್ಳಿಗಳಿಂದ ಜನ ವಲಸೆ ತಡೆಯಲು ಜಾನುವಾರು, ಕೋಳಿ ಸಾಕಾಣಿಕೆ ಶೆಡ್‌ ನಿರ್ಮಾಣ: ಸರ್ಕಾರದಿಂದ ಉಪಾಯ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಗ್ರಾಮೀಣ ಕುಟುಂಬಗಳು ಅದರಲ್ಲೂ ಸಣ್ಣ ಮಟ್ಟದ ರೈತರು ಜೀವನೋಪಾಯಕ್ಕಾಗಿ ಪರದಾಡುತ್ತಿರುವ ಹಿನ್ನೆಲೆಯಲ್ಲಿ, ಉದ್ಯೋಗ ಅರಸಿ ಜನರು ವಲಸೆ ಹೋಗುವುದನ್ನು ತಡೆಯಲು ದುರ್ಬಲ ವರ್ಗದ ಕುಟುಂಬಗಳಿಗೆ ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇದರ ಭಾಗವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕೋಳಿ ಮತ್ತು ಹೈನುಗಾರಿಕೆ ರೈತರಿಗೆ ಸಾವಿರಾರು ಶೆಡ್‌ಗಳನ್ನು ನಿರ್ಮಿಸಿಕೊಟ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಿದೆ.

ಈ ಯೋಜನೆಯಡಿ ಹಳ್ಳಿಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ವಸಹಾಯ ಗುಂಪುಗಳಿಗೆ (SHG) ಸೇರಿದ ಜಮೀನುಗಳಲ್ಲಿ ಜಾನುವಾರು ಸಾಕಾಣಿಕೆ ಶೆಡ್‌ಗಳನ್ನು ನಿರ್ಮಿಸಲಾಗುತ್ತದೆ. ವಿ.ಬಿ.-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಕಾರ್ಮಿಕರು ಹಾಗೂ ನಿರ್ಮಾಣ ಸಾಮಗ್ರಿಗಳ ವೆಚ್ಚವನ್ನು ಭರಿಸಲಿದೆ.

ಗ್ರಾಮಗಳಲ್ಲೇ ಜೀವನೋಪಾಯಕ್ಕೆ ಅಗತ್ಯವಾದ ಆಸ್ತಿಗಳನ್ನು ಸೃಷ್ಟಿಸಿಕೊಳ್ಳಲು ದುರ್ಬಲ ಕುಟುಂಬಗಳಿಗೆ ನೆರವು ನೀಡುವುದು ಈ ಉಪಕ್ರಮದ ಉದ್ದೇಶವಾಗಿದೆ. ಬಳಿಕ ಪಶುಸಂಗೋಪನಾ ಇಲಾಖೆ ಮತ್ತು ಇತರ ಸರ್ಕಾರಿ ಯೋಜನೆಗಳ ನೆರವಿನೊಂದಿಗೆ ಆದಾಯ ಗಳಿಸುವ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ.

ವಿಶೇಷವಾಗಿ ಭೂರಹಿತ ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಪ್ರದೇಶಗಳ ಇತರ ದುರ್ಬಲ ಕುಟುಂಬಗಳಿಗೆ ಅನುಕೂಲವಾಗುವಂತೆ ಕುರಿ, ಮೇಕೆ, ಜಾನುವಾರು ಮತ್ತು ಕೋಳಿ ಸಾಕಾಣಿಕೆ ಶೆಡ್‌ಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಹಾಗೂ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಮನ್ವಯದೊಂದಿಗೆ ವಿ.ಬಿ.-ಜಿ ರಾಮ್ ಜಿ ಯೋಜನೆಯಡಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತದೆ.

ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ಬರೆದಿರುವ ಪತ್ರದಲ್ಲಿ, ಎಲ್ ನಿನೊ ಚಂಡಮಾರುತ ಪರಿಣಾಮ ಮತ್ತು ತೀವ್ರ ಬರ ಪರಿಸ್ಥಿತಿಯಿಂದಾಗಿ ಭೂರಹಿತ ಕೃಷಿ ಕಾರ್ಮಿಕರು ಹಾಗೂ ಬಡ ಗ್ರಾಮೀಣ ಕುಟುಂಬಗಳಲ್ಲಿ ವಲಸೆ ಹೆಚ್ಚಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಗ್ರಾಮಗಳಲ್ಲಿಯೇ ಸುಸ್ಥಿರ ಜೀವನೋಪಾಯ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಇಂತಹ ವಲಸೆಯನ್ನು ತಡೆಯುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ವಲಸೆ ಹೋಗುವ ಸಾಧ್ಯತೆಯಿರುವ ದುರ್ಬಲ ಕುಟುಂಬಗಳನ್ನು ಗುರುತಿಸಿ, ಜೀವನೋಪಾಯ ಆಧಾರಿತ ಚಟುವಟಿಕೆಗಳನ್ನು ಕೈಗೊಳ್ಳಲು ಅವುಗಳ ಅರ್ಹತೆಯನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕುಟುಂಬಗಳ ಸಾಮರ್ಥ್ಯ ಮತ್ತು ಅಗತ್ಯಗಳಿಗೆ ಅನುಗುಣವಾಗಿ ಜಾನುವಾರು ಸಾಕಾಣಿಕೆ ಶೆಡ್‌ಗಳ ನಿರ್ಮಾಣ ಸೇರಿದಂತೆ ವಿವಿಧ ಆಸ್ತಿಗಳನ್ನು ಸೃಷ್ಟಿಸಿಕೊಳ್ಳಲು ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಕೈಗೊಳ್ಳಲು ನೆರವು ನೀಡಬಹುದು ಎಂದು ತಿಳಿಸಿದ್ದಾರೆ.

ಅರ್ಹ ಭೂರಹಿತ ಕೃಷಿ ಕಾರ್ಮಿಕರು ಮತ್ತು ದುರ್ಬಲ ಗ್ರಾಮೀಣ ಕುಟುಂಬಗಳನ್ನು ಸ್ವಸಹಾಯ ಗುಂಪುಗಳ ನೆರವಿನೊಂದಿಗೆ ಗುರುತಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಎನ್‌ಆರ್‌ಎಲ್‌ಎಂ ಸ್ವಸಹಾಯ ಗುಂಪು, ಸಮುದಾಯ ಸಂಘಟನೆಗಳು ಹಾಗೂ ಪಶುಸಂಗೋಪನಾ ಇಲಾಖೆಯೊಂದಿಗೆ ಸಮನ್ವಯ ಸಾಧಿಸುವಂತೆ ನಿರ್ದೇಶನ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.