ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿ.ಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ; Video
ನೀವು ಬಿಜೆಪಿ ಮತ್ತು ಜೆಡಿಎಸ್‌ನ ರಾಜಕೀಯವನ್ನು ನೋಡಿದ್ದೀರಿ. ಇತ್ತೀಚಿನ ಅಧಿವೇಶನದಲ್ಲಿ ರೈತರ ಬಗ್ಗೆ ಅಥವಾ ಬರ ಪರಿಸ್ಥಿತಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ..

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಬಾಗಲಕೋಟೆ ಮತ್ತು ವಿಜಯನಗರ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಸಾಲಮನ್ನಾ ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ಬಿಜೆಪಿ ನಾಯಕರೂ ತಮ್ಮೊಂದಿಗೆ ದೆಹಲಿಗೆ ಬರಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ರೈತರ ಸಮಸ್ಯೆ ಹಾಗೂ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆದಿಲ್ಲ ಎಂದು ಹೇಳಿದರು.
“ನೀವು ಬಿಜೆಪಿ ಮತ್ತು ಜೆಡಿಎಸ್‌ನ ರಾಜಕೀಯವನ್ನು ನೋಡಿದ್ದೀರಿ. ಇತ್ತೀಚಿನ ಅಧಿವೇಶನದಲ್ಲಿ ರೈತರ ಬಗ್ಗೆ ಅಥವಾ ಬರ ಪರಿಸ್ಥಿತಿಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ” ಎಂದು ಅವರು ಹೇಳಿದರು.
ಬರ ಪರಿಸ್ಥಿತಿ ಕುರಿತು ಚರ್ಚಿಸಲು ಅವಕಾಶ ಸಿಗದಿರುವ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದರು. ಆಡಳಿತಾರೂಢ ಕಾಂಗ್ರೆಸ್ ಶಾಸಕರೂ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಶಿವಕುಮಾರ್ ತಿಳಿಸಿದರು.
“ನಾನು ಅವರಿಗೆ ಸಹಾಯ ಮಾಡಲು ಬಯಸುತ್ತೇನೆ. ಕೇಂದ್ರ ಸರ್ಕಾರವೂ ಹಣಕಾಸಿನ ನೆರವು ನೀಡಬೇಕು. ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯುವ ಅಗತ್ಯವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ್ದಾರೆ” ಎಂದರು.
ಕೇಂದ್ರ ಹೊಣೆ ಹೊರಬೇಕು
ರೈತರ ಸಾಲ ಮನ್ನಾದ ಜವಾಬ್ದಾರಿಯನ್ನು ಕೇಂದ್ರ ಸರ್ಕಾರವೇ ವಹಿಸಿಕೊಳ್ಳಬೇಕು. “ಪ್ರಧಾನಿ ಅವರೇ ಇದು ಬರ ಪರಿಸ್ಥಿತಿ ಎಂದು ಹೇಳಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರವೇ ಸಾಲ ಮನ್ನಾದ ಹೊಣೆ ಹೊತ್ತುಕೊಳ್ಳಬೇಕು,” ಎಂದು ಮುಖ್ಯಮಂತ್ರಿ ಹೇಳಿದರು.
ಈ ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಮ್ಮೊಂದಿಗೆ ದೆಹಲಿಗೆ ಬರಬೇಕು ಎಂದು ಶಿವಕುಮಾರ್ ಕರೆ ನೀಡಿದರು.
ಪಾರ್ಕ್ ಬಿಲ್ ಗೆ ಸಮರ್ಥನೆ
ಇದೇ ವೇಳೆ, ಉದ್ಯಾನವನ ಮತ್ತು ಪಾರ್ಕ್‌ಗಳ ಭೂಮಿಯ ಶೇ.5ರಷ್ಟನ್ನು ಸಾರ್ವಜನಿಕ ಮೂಲಸೌಕರ್ಯ ಹಾಗೂ ಉಪಯುಕ್ತತಾ ಯೋಜನೆಗಳಿಗೆ ಬಳಸಲು ಅವಕಾಶ ನೀಡುವ ವಿವಾದಿತ ಪಾರ್ಕ್ಸ್ ಬಿಲ್ ಹಿಂಪಡೆದಿರುವ ಸರ್ಕಾರದ ನಿರ್ಧಾರವನ್ನು ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಬಿಲ್ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಿ, ಅದರ ಉದ್ದೇಶಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿಯೇ ಅದನ್ನು ಹಿಂಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಿಲ್ ಹಿಂಪಡೆದಿರುವುದನ್ನು ಬಿಜೆಪಿ ತನ್ನ ಗೆಲುವು ಎಂದು ಬಿಂಬಿಸುತ್ತಿರುವುದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಅವರು, ಬಿಜೆಪಿಯನ್ನು ‘ಅಭಿವೃದ್ಧಿ ವಿರೋಧಿ ಪಕ್ಷ’ ಎಂದು ಟೀಕಿಸಿದರು. ಬೆಂಗಳೂರಿಗೆ ಎದುರಾಗಿರುವ ಯಾವುದೇ ‘ಶಾಪ’ಕ್ಕೂ ಬಿಜೆಪಿಯೇ ಕಾರಣ ಎಂದು ವಾಗ್ದಾಳಿ ನಡೆಸಿದರು.
ಅಂದಹಾಗೆ ಬರ ಪರಿಸ್ಥಿತಿ, ಅದರಿಂದ ಉಂಟಾಗಿರುವ ಕೃಷಿ ಬಿಕ್ಕಟ್ಟು ಹಾಗೂ ಪ್ರಸ್ತಾವಿತ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನವನ್ನು ಸೆಪ್ಟೆಂಬರ್ 21ರಿಂದ 23ರವರೆಗೆ ಕರೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



