ರಾಜ್ಯ

ಕರ್ನಾಟಕದ ಬರಪೀಡಿತ ಪಟ್ಟಿಗೆ ಇನ್ನೂ 25 ತಾಲೂಕುಗಳು ಸೇರ್ಪಡೆ: ಡಾ ಜಿ ಪರಮೇಶ್ವರ್

ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇತರ ಪ್ರದೇಶಗಳಲ್ಲಿ ಮೌಲ್ಯಮಾಪನ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಇನ್ನೂ 25 ತಾಲೂಕುಗಳು ಬರ ಘೋಷಣೆಗೆ ಅಗತ್ಯ ಮಾನದಂಡಗಳನ್ನು ಪೂರೈಸಿದ್ದು, ಶೀಘ್ರದಲ್ಲೇ ಅವುಗಳನ್ನು ಬರಪೀಡಿತ ಎಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.

ಕರ್ನಾಟಕದ ಬರಪೀಡಿತ ಪಟ್ಟಿಗೆ ಇನ್ನೂ 25 ತಾಲೂಕುಗಳು ಸೇರ್ಪಡೆ: ಡಾ ಜಿ ಪರಮೇಶ್ವರ್
ಕೆಆರ್ ಎಸ್ ಜಲಾಶಯ
Published On :

ಬೆಂಗಳೂರು: ಕರ್ನಾಟಕದ ಬರಪೀಡಿತ ತಾಲೂಕುಗಳ ಪಟ್ಟಿಗೆ ಇನ್ನೂ 25 ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಬರ ಪರಿಸ್ಥಿತಿಯ ಎರಡನೇ ಹಂತದ ಮೌಲ್ಯಮಾಪನವನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇತರ ಪ್ರದೇಶಗಳಲ್ಲಿ ಮೌಲ್ಯಮಾಪನ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಇನ್ನೂ 25 ತಾಲೂಕುಗಳು ಬರ ಘೋಷಣೆಗೆ ಅಗತ್ಯ ಮಾನದಂಡಗಳನ್ನು ಪೂರೈಸಿದ್ದು, ಶೀಘ್ರದಲ್ಲೇ ಅವುಗಳನ್ನು ಬರಪೀಡಿತ ಎಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.

ಉಪಗ್ರಹ ಚಿತ್ರಗಳು, ಸ್ಥಳ ಪರಿಶೀಲನೆ ಹಾಗೂ ತಾಂತ್ರಿಕ ಅಧ್ಯಯನಗಳ ಆಧಾರದ ಮೇಲೆ ವೈಜ್ಞಾನಿಕವಾಗಿ ಬರ ಮೌಲ್ಯಮಾಪನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಹಂತ ಹಂತವಾಗಿ ಬರ ಮೌಲ್ಯಮಾಪನ ನಡೆಯುತ್ತಿದ್ದು, ಬರಪೀಡಿತ ಪ್ರದೇಶಗಳನ್ನು ಘೋಷಿಸುವಲ್ಲಿ ಯಾವುದೇ ವಿಳಂಬವಾಗಿಲ್ಲ. ಮುಂಗಾರು ಮತ್ತು ಹಿಂಗಾರು ಮಳೆ ಎರಡರಲ್ಲೂ ಕೊರತೆ ಇರುವವರೆಗೆ ಮೌಲ್ಯಮಾಪನ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಕಳೆದ ಬಾರಿ ಸುಮಾರು 200 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ವರ್ಷವೂ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗುವ ಸಾಧ್ಯತೆಯಿದೆ. ಕರಾವಳಿ ಪ್ರದೇಶ ಹೊರತುಪಡಿಸಿ ರಾಜ್ಯದ ಬಹುತೇಕ ಭಾಗಗಳಲ್ಲಿ ಬರ ಪರಿಸ್ಥಿತಿ ಇದೆ ಎಂದು ಅವರು ಹೇಳಿದರು.

ತಮ್ಮ ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಉದ್ದೇಶಪೂರ್ವಕವಾಗಿ ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕೆಲವು ಶಾಸಕರು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಇಡೀ ರಾಜ್ಯವೇ ಇಂದು ಬರ ಪರಿಸ್ಥಿತಿ ಎದುರಿಸುತ್ತಿದೆ. ಯಾವ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂಬುದನ್ನು ನಿರ್ಧರಿಸುವಲ್ಲಿ ರಾಜ್ಯ ಸರ್ಕಾರದ ಯಾವುದೇ ವ್ಯಕ್ತಿಯ ಪಾತ್ರವಿಲ್ಲ. ಕೆಲವು ತಾಲೂಕುಗಳನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ ಆಧಾರರಹಿತ. ರಾಜಕೀಯ ಪಕ್ಷದ ಒಲವು ಆಧರಿಸಿ ಬರ ಪರಿಸ್ಥಿತಿ ಉಂಟಾಗುವುದಿಲ್ಲ. ಈಗಾಗಲೇ ವಿರೋಧ ಪಕ್ಷದ ಶಾಸಕರು ಪ್ರತಿನಿಧಿಸುವ ತಾಲೂಕುಗಳೂ ಪಟ್ಟಿಯಲ್ಲಿವೆ ಎಂದು ಹೇಳಿದರು.

ರಾಜ್ಯ ಸರ್ಕಾರವೇ ತನ್ನದೇ ಆದ ರೀತಿಯಲ್ಲಿ ಬರಪೀಡಿತ ಪ್ರದೇಶಗಳನ್ನು ಘೋಷಿಸಿದರೆ ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಡಿಸಿಎಂ ಹೇಳಿದರು.

ಕೇಂದ್ರದಿಂದ ಬರ ಪರಿಹಾರ ಪಡೆಯಲು ನಿಗದಿತ ಪ್ರಕ್ರಿಯೆಯನ್ನು ಅನುಸರಿಸುವುದು ಉತ್ತಮ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿಯೇ ಬರಪೀಡಿತ ಪ್ರದೇಶಗಳನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದರು.

‘ಅಹಿಂದದಲ್ಲಿ ಯಾವುದೇ ಒಡಕು ಇಲ್ಲ’

ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸತೀಶ್ ಜಾರಕಿಹೊಳಿ ಮತ್ತು ಡಾ ಹೆಚ್ ಸಿ ಮಹದೇವಪ್ಪ ಅವರನ್ನು ಆಹ್ವಾನಿಸಿರಲಿಲ್ಲ ಎಂಬ ವರದಿಗಳ ಹಿನ್ನೆಲೆಯಲ್ಲಿ ಅಹಿಂದ (AHINDA) ಒಕ್ಕೂಟದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆಯೇ ಎಂಬ ಪ್ರಶ್ನೆಗೆ ಪರಮೇಶ್ವರ ಸ್ಪಷ್ಟನೆ ನೀಡಿದರು.

ಇತ್ತೀಚೆಗೆ ನಡೆದ ಕಾರ್ಯಕ್ರಮ ಅಹಿಂದ ಸಮಾವೇಶವಾಗಿರಲಿಲ್ಲ, ನಮ್ಮ ನಡುವೆ ಯಾವುದೇ ಒಡಕು ಇಲ್ಲ ಮತ್ತು ನಾಯಕತ್ವವೂ ವಿಭಿನ್ನ ಬಣಗಳಾಗಿ ವಿಭಜನೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.