ವಿರೋಧ ಪಕ್ಷದ ದಲಿತ ನಾಯಕರನ್ನು ಬೆದರಿಸಲು ತನಿಖಾ ಸಂಸ್ಥೆಗಳ ದುರ್ಬಳಕೆ: ಬಿ.ಕೆ ಹರಿಪ್ರಸಾದ್; Video
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿ ನಡೆಯುತ್ತಿರುವ ಹೊಸ ತನಿಖೆಯ ಭಾಗವಾಗಿ ಕರ್ನಾಟಕದ ಸುಮಾರು 18 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ ಬೆನ್ನಲ್ಲೇ, ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರ ಪ್ರತಿಪಕ್ಷ ನಾಯಕರನ್ನು ಬೆದರಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿ ನಡೆಯುತ್ತಿರುವ ಹೊಸ ತನಿಖೆಯ ಭಾಗವಾಗಿ ಕರ್ನಾಟಕದ ಸುಮಾರು 18 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿರುವ 64 ವರ್ಷದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳು, ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಬೆಳಗಾವಿಯಲ್ಲಿರುವ ಅವರ ಬಾಮೈದ ಯ.ಡಿ. ಮಂಜುನಾಥ್ ಅವರಿಗೆ ಸಂಬಂಧಿಸಿದ ಸ್ಥಳಗಳೂ ಶೋಧದ ವ್ಯಾಪ್ತಿಗೆ ಒಳಪಟ್ಟಿವೆ.
ಎನ್‌ಡಿಎ ಸರ್ಕಾರದ ಅಡಿಯಲ್ಲಿ ಜಾರಿ ನಿರ್ದೇಶನಾಲಯ (ED), ಆದಾಯ ತೆರಿಗೆ ಇಲಾಖೆ ಮತ್ತು ಸಿಬಿಐಗಳನ್ನು ಪ್ರತಿಪಕ್ಷಗಳ ನಾಯಕರನ್ನು ಬೆದರಿಸಲು ಹಾಗೂ ಮತ್ತೊಮ್ಮೆ ವಾಷಿಂಗ್ ಮೆಷಿನ್ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದು ಹರಿಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿದ್ದಾರೆ, ಸುಪ್ರೀಂ ಕೋರ್ಟ್ ಈಗಾಗಲೇ ಇಡಿಯನ್ನು ತರಾಟೆಗೆ ತೆಗೆದುಕೊಂಡಿದೆ. ಆದರೆ, ಅದರಿಂದ ಅವರು ಇನ್ನೂ ಯಾವುದೇ ಪಾಠ ಕಲಿತಿಲ್ಲ ಎಂದು ತೋರುತ್ತದೆ ಎಂದು ಹರಿಪ್ರಸಾದ್ ಹೇಳಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರಿಯಾಂಕಾ ಜಾರಕಿಹೊಳಿ ಅವರ ಸ್ಥಳದ ಮೇಲೂ ಶೋಧ ನಡೆಸಿರುವುದನ್ನು ಪ್ರಶ್ನಿಸಿದ ಹರಿಪ್ರಸಾದ್, ಸಂಸದರ ಮೇಲೆ ದಾಳಿ ನಡೆಸುವ ಮುನ್ನ ತನಿಖಾ ಸಂಸ್ಥೆಯು ಲೋಕಸಭಾ ಸ್ಪೀಕರ್ ಅವರ ಅನುಮತಿ ಪಡೆದಿತ್ತೇ ಎಂದು ಪ್ರಶ್ನಿಸಿದರು.
ಮಂಜುನಾಥ್ ಅವರ ತಂದೆ ಹಾಗೂ ಮಾಜಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ನಿವಾಸಗಳ ಮೇಲೆ ಏಕೆ ಶೋಧ ನಡೆಸಲಾಗಿಲ್ಲ ಎಂಬುದನ್ನೂ ಹರಿಪ್ರಸಾದ್ ಪ್ರಶ್ನಿಸಿದರು.
ಅಲ್ಲದೆ, ಜಾರಕಿಹೊಳಿ ಅವರ ಸಹೋದರರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಮತ್ತು ಲಕ್ಷ್ಮಣ ಜಾರಕಿಹೊಳಿ ಅವರು ಬಿಜೆಪಿ ನಾಯಕರು. ಅವರೂ ಮಂಜುನಾಥ್ ಅವರ ಸಂಬಂಧಿಕರಾಗಿದ್ದಾರೆ, ಅವರ ಮೇಲೆ ಏಕೆ ದಾಳಿ ನಡೆಸಿಲ್ಲ, ಸತೀಶ್ ಜಾರಕಿಹೊಳಿ ಅವರನ್ನು ಮಾತ್ರ ಏಕೆ ಗುರಿಯಾಗಿಸಲಾಗುತ್ತಿದೆ ಎಂದು ಅವರು ಪ್ರಶ್ನಿಸಿದರು.
ಇಡಿ ಅಧಿಕಾರಿಗಳ ಶೋಧ ಕಾರ್ಯಾಚರಣೆಗೆ ಸಿಆರ್‌ಪಿಎಫ್ ಸಿಬ್ಬಂದಿಯ ಭದ್ರತೆ ಒದಗಿಸಲಾಗಿತ್ತು. ಈ ಹೊಸ ತನಿಖೆಯು ಅಬಕಾರಿ ಇಲಾಖೆಯ ಅಧಿಕಾರಿಯಾಗಿರುವ ಮಂಜುನಾಥ್ ವಿರುದ್ಧ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



