ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು, Video
ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್‌ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಡಿಕೇರಿ: ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್‌ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಮೃತರನ್ನು ಹೊಸಕೋಟೆಯ ನಿವಾಸಿ, ಎಲೆಕ್ಟ್ರಿಷಿಯನ್ ರತನ್ ಅಲಿಯಾಸ್ ಉನ್ನಿ (36), ಅವರ ಸಹೋದ್ಯೋಗಿ ಆದರ್ಶ್ (26) ಹಾಗೂ ಹೊದ್ದೂರು ಗ್ರಾಮದ ನಿವಾಸಿ, ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಕುಮಾರ್ (42) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೂಡಲೇ ಸ್ಥಳೀಯರು ಅವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ಅಪಘಾತದಲ್ಲಿ ಒಟ್ಟು 7 ಮಂದಿಗೆ ಗಾಯಗಳಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುವಿನ್, ಚಂದ್ರಶೇಖರ್, ಆದರ್ಶ್ ಮತ್ತು ಅಜಯ್ ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಆಗಿದ್ದೇನು?
ಮಾಹಿತಿ ಪ್ರಕಾರ, ಗುಡ್ಡೆಹೊಸೂರುನಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರಿನಲ್ಲಿ ಹೊಸಕೋಟೆಗೆ ವಾಪಸ್ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರನ್ನು ಉನ್ನಿ ಚಲಾಯಿಸುತ್ತಿದ್ದರು. ಓವರ್‌ಟೇಕ್ ಮಾಡಲು ಮುಂದಾದ ವೇಳೆ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಬಳಿಕ ಅದೇ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಪಿಕಪ್ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಉನ್ನಿ ಹಾಗೂ ಆದರ್ಶ್ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಪಿಕಪ್ ವಾಹನದಲ್ಲಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಮೊದಲು ಕುಶಾಲನಗರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಹಾಗೂ ಮಡಿಕೇರಿಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟಿದ್ದು, ಕಾರು ಹಾಗೂ ಪಿಕಪ್ ವಾಹನಗಳು ತೀವ್ರವಾಗಿ ಹಾನಿಗೊಳಗಾಗಿವೆ. ಈ ಸಂಬಂಧ ಕುಶಾಲನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



