ರಾಜ್ಯ

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ

ಮುಂದಿನ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 30 ದಿನಗಳಿಗೆ ಒಮ್ಮೆ ತನಿಖಾ ವರದಿಯ ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಒಟ್ಟು 17 ನಿರ್ದೇಶಗಳನ್ನು ಹೈಕೋರ್ಟ್ ಎಸ್ ಐಟಿಗೆ ನೀಡಿದೆ.

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ
ಕೆಪಿಎಸ್ ಸಿ - ಹೈಕೋರ್ಟ್
Published On :

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದ ತನಿಖೆಗಾಗಿ ಕರ್ನಾಟಕ ಹೈಕೋರ್ಟ್ ಸೋಮವಾರ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದೆ.

ಜೈಲು ಮತ್ತು ತಿದ್ದುಪಡಿ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಎಸ್ಐಟಿಯಲ್ಲಿ ಐಪಿಎಸ್ ಅಧಿಕಾರಿಗಳಾದ ದಿವ್ಯಾ ವಿ ಗೋಪಿನಾಥ್, ಅನುಪ್ ಎ ಶೆಟ್ಟಿ, ಕುಶಾಲ್ ಚೌಕ್ಸೆ ಮತ್ತು ಕ್ಷಮಾ ಮಿಶ್ರಾ ಅವರನ್ನು ಸದಸ್ಯರನ್ನಾಗಿ ನ್ಯಾಯಾಲಯ ನೇಮಿಸಿದೆ.

ಕೆಪಿಎಸ್ ಸಿ ಹಗರಣ ಕುರಿತು ಸಿಬಿಐ ತನಿಖೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಎಸ್ಐಟಿ ತನಿಖೆಗೆ ಆದೇಶಿಸಿದೆ.

ಮುಂದಿನ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 30 ದಿನಗಳಿಗೆ ಒಮ್ಮೆ ತನಿಖಾ ವರದಿಯ ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಒಟ್ಟು 17 ನಿರ್ದೇಶಗಳನ್ನು ಹೈಕೋರ್ಟ್ ಎಸ್ ಐಟಿಗೆ ನೀಡಿದೆ.

ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಸುಳ್ಳು ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡಿದ ಕೆಪಿಎಸ್ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧ ಮತ್ತು ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಭ್ಯರ್ಥಿಗಳ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು(ಎಫ್ಐಆರ್) ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು.

ಕೆಪಿಎಸ್‌ಸಿ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಇಲ್ಲಿಯವರೆಗೆ ಸಂಗ್ರಹಿಸಲಾದ ಸಂಪೂರ್ಣ ದಾಖಲೆಗಳು, ಸಾಮಗ್ರಿಗಳು ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಎಸ್‌ಐಟಿಗೆ ವಹಿಸುವಂತೆ ನಿರ್ದೇಶಿಸಿದ ನ್ಯಾಯಾಲಯ, ಎಸ್‌ಐಟಿ, ಜಾರಿ ನಿರ್ದೇಶನಾಲಯ(ಇಡಿ)ದೊಂದಿಗೆ ಸಹಕರಿಸಬೇಕು ಎಂದು ಹೇಳಿದೆ. ಇಡಿ ಪ್ರಕರಣದ ತನಿಖೆಯನ್ನು ಸಮಾನಾಂತರವಾಗಿ ನಡೆಸುತ್ತಿದೆ ಮತ್ತು ತನಿಖೆಯ ಮಾಹಿತಿಯನ್ನು ಪಡೆಯುತ್ತಿದೆ.

ಅಲ್ಲದೆ ರಾಜ್ಯ ಸರ್ಕಾರ ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಬೇಕು. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಹೊರಬಿದ್ದ ತಕ್ಷಣ, ಸುಮಾರು 50ಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬೆನ್ನಲ್ಲೇ ಮಧ್ಯವರ್ತಿಗಳು ಪ್ರತಿ ಪಶು ವೈದ್ಯಾಧಿಕಾರಿ ಹುದ್ದೆಗೆ 70 ಲಕ್ಷದಿಂದ 80 ಲಕ್ಷದವರೆಗೆ ಲಂಚ ಕೇಳುತ್ತಿರುವ ಆಡಿಯೋ ಸಂಭಾಷಣೆಗಳು ಬಹಿರಂಗಗೊಂಡಿದ್ದವು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರವು ಇದರ ತನಿಖೆಯನ್ನು ಸಿಐಡಿ (CID)ಗೆ ವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.