ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ತರಾಟೆ ಬಳಿಕ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಕ್ಷಮೆಯಾಚನೆ; Video
ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಈ ವೇಳೆ ಐಶ್ವರ್ಯ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಮಂಡ್ಯ: ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗರ್ಭಗುಡಿಗೆ ಬಿಡುವ ವಿಚಾರದಲ್ಲಿ ಕಿರಿಕ್ ಮಾಡಿದ್ದರು.
ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಈ ವೇಳೆ ಐಶ್ವರ್ಯ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷಮೆ ಕೋರಲು ಕೋರ್ಟ್ ತಾಕೀತು ಹಿನ್ನೆಲೆ ಐಶ್ವರ್ಯಗೌಡ ಬಹಿರಂಗ ಕ್ಷಮೆಕೋರಿದ್ದಾರೆ.
ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಹೆಚ್ಚು ಜನಸಂದಣಿ ಇದ್ದಿದ್ದರಿಂದ ಹಾಗೂ ನನ್ನ ಮಕ್ಕಳಿಗೆ 'ಅಮ್ಮ' ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು.
ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ವೀಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ.
ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರು ಮಹಿಳಾ ಪಿಎಸ್‌ಐ ಬಳಿ ಕ್ಷಮೆ ಯಾಚಿಸಿದರೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು.

BJP ಶಾಸಕ ಸುರೇಶ್ ಗೌಡ ಪುತ್ರಿ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ; ಹಲವು ವಿಡಿಯೊ ತಡವಾಗಿ ಬಹಿರಂಗ: Viral Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


