ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ!
ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರಂತರವಾಗಿ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಲಾಗುತ್ತಿದ್ದು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಈ ಪೈಕಿ 51 ತಾಲೂಕುಗಳು ತೀವ್ರ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದರ ಜೊತೆಗೆ, ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ 4ನೇ ಹಂತದಲ್ಲಿ 7 ಜಿಲ್ಲೆಗಳ 11 ತಾಲೂಕುಗಳು Step-3: Ground Truthingಗೆ ಅರ್ಹತೆ ಪಡೆದಿವೆ. ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿಯ ಆಧಾರದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್‌ಗೆ ಸೇರಿಸಲಾಗುವುದು.
ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ನಾವು ಬದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಜನರ ದಾಹ ನೀಗಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ. ಬರ ಪರಿಸ್ಥಿತಿಯ ನಡುವೆಯೂ ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಪೈಕಿ ಏಪ್ರಿಲ್–ಮೇ ಅವಧಿಯಲ್ಲಿ ಜಿಲ್ಲೆಗಳಿಗೆ ₹117 ಕೋಟಿ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆಗೆ ₹189 ಕೋಟಿ ಅನುದಾನ ನೀಡಿದ್ದು, ಒಟ್ಟಾರೆ ₹306 ಕೋಟಿ ಅನುದಾನವನ್ನು ಒದಗಿಸಲಾಗಿದೆ. ನೀರಿನ ಕೊರತೆಯಿಂದ ಯಾವುದೇ ಕುಟುಂಬ ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ, ಅಗತ್ಯವಿರುವ ಕಡೆಗಳಲ್ಲಿ ತಕ್ಷಣದ ನೀರು ಪೂರೈಕೆ ಹಾಗೂ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.ಜನರ ಬದುಕಿಗೆ ಅತ್ಯಗತ್ಯವಾದ ಕುಡಿಯುವ ನೀರಿನ ಪೂರೈಕೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



