ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ 'ಮಹಾ' ಚರ್ಚೆ; ಸರ್ಕಾರದ ನಿಲುವೇನು..?
ಕರ್ನಾಟಕ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಹಲವು ಬಾರಿ ತಿರಸ್ಕರಿಸಿದ್ದರೂ ಕೇಂದ್ರ ಸರ್ಕಾರ ನಿರಂತರವಾಗಿ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದೆ.

ಬೆಂಗಳೂರು: ಪಶ್ಚಿಮ ಘಟ್ಟಗಳ ನಿವಾಸಿಗಳು ಹಾಗೂ ರೈತರ ಮೇಲೆ ಕಸ್ತೂರಿರಂಗನ್ ವರದಿ ಜಾರಿಯ ಪರಿಣಾಮಗಳ ಕುರಿತು ವಿಧಾನ ಪರಿಷತ್ ಸದಸ್ಯರು ಸೋಮವಾರ ಯಾವುದೇ ವಿರಾಮವಿಲ್ಲದೆ ಸುಮಾರು 10 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ಈ ಚರ್ಚೆಗೆ ರಾಜ್ಯ ಸರ್ಕಾರ ಮಂಗಳವಾರ ಉತ್ತರಿಸಲಿದೆ ಎಂದು ಸಭಾಪತಿ ಸಲೀಂ ಅಹ್ಮದ್ ತಿಳಿಸಿದರು.
ಸೋಮವಾರ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು, ಕರ್ನಾಟಕ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಹಲವು ಬಾರಿ ತಿರಸ್ಕರಿಸಿದ್ದರೂ ಕೇಂದ್ರ ಸರ್ಕಾರ ನಿರಂತರವಾಗಿ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದೆ. ಹೀಗಾಗಿ ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಹಾಗೂ ಅಲ್ಲಿನ ಜನರ ಜೀವನೋಪಾಯದ ರಕ್ಷಣೆ ಎರಡೂ ಒಟ್ಟಿಗೆ ಸಾಗಬೇಕು ಎಂದು ತಿಳಿಸಿದರು.
ಅರಣ್ಯ, ವನ್ಯಜೀವಿ ಅಭಯಾರಣ್ಯ, ರಾಷ್ಟ್ರೀಯ ಉದ್ಯಾನಗಳು ಹಾಗೂ ಪರಿಸರ ಸೂಕ್ಷ್ಮ ವಲಯಗಳ ಮೂಲಕ ಕರ್ನಾಟಕ ಈಗಾಗಲೇ ದೊಡ್ಡ ಪ್ರಮಾಣದ ಪ್ರದೇಶವನ್ನು ಸಂರಕ್ಷಿಸಿದೆ. ಕೇಂದ್ರ ಸರ್ಕಾರ ಪದೇಪದೆ ಅಧಿಸೂಚನೆಗಳನ್ನು ಹೊರಡಿಸುತ್ತಿರುವುದು ಪಶ್ಚಿಮ ಘಟ್ಟಗಳಲ್ಲಿ ವಾಸಿಸುವ ಜನರ ಆತಂಕವನ್ನು ಹೆಚ್ಚಿಸುತ್ತಿದೆ.
ಕಸ್ತೂರಿರಂಗನ್ ವರದಿಯನ್ನು ಉಪಗ್ರಹ ಚಿತ್ರಗಳ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಮಲೆನಾಡು ಭಾಗದಲ್ಲಿ ವರದಿಗೆ ಸಂಬಂಧಿಸಿದಂತೆ ಸಾಮಾನ್ಯವಾಗಿ ವ್ಯಕ್ತವಾಗುತ್ತಿರುವ ಅಭಿಪ್ರಾಯವೆಂದರೆ, ಇದರಲ್ಲಿ ಸೂಕ್ತವಾದ ಸ್ಥಳೀಯ ಮಟ್ಟದ ಪರಿಶೀಲನೆ ನಡೆದಿಲ್ಲ ಎಂಬುದಾಗಿದೆ. ವಾಸ್ತವ ಪರಿಸ್ಥಿತಿಯನ್ನು ತಿಳಿಯಲು ಭೌತಿಕ ಸಮೀಕ್ಷೆ ನಡೆಸುವುದು ಅಗತ್ಯ ಎಂದು ಹೇಳಿದರು.
ಚರ್ಚೆಯಲ್ಲಿ ಭಾಗವಹಿಸಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು, ಕೇರಳದಲ್ಲಿ ನಡೆಸಿದ ರೀತಿಯಲ್ಲಿ ಭೌತಿಕ ಸಮೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು.
ಗುರುತಿಸಲಾಗಿರುವ ಎಲ್ಲ ಹಸಿರು ಪ್ರದೇಶಗಳೂ ಅರಣ್ಯಗಳಲ್ಲ. ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದನ್ನು ಮಾಡಬಹುದು ಮತ್ತು ಯಾವುದನ್ನು ಮಾಡಬಾರದು ಎಂಬುದರ ಕುರಿತು ಸ್ಪಷ್ಟತೆ ನೀಡಬೇಕು ಎಂದು ಒತ್ತಾಯಿಸಿದರು.
ಒಂದು ಪ್ರದೇಶವು ಸುಸ್ಥಿರವಾಗಿ ಎಷ್ಟು ಜನಸಂಖ್ಯೆ, ಕಟ್ಟಡ ನಿರ್ಮಾಣ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ನೀರಿನ ಬಳಕೆಯನ್ನು ಸಹಿಸಿಕೊಳ್ಳಬಲ್ಲದು ಎಂಬುದನ್ನು ಅಂದಾಜಿಸಿ, ಅದರ ಸಾಮರ್ಥ್ಯಕ್ಕೆ ಅನುಗುಣವಾಗಿ ಅಭಿವೃದ್ಧಿ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿದರು.
ಚರ್ಚೆಯಲ್ಲಿ ಪಾಲ್ಗೊಂಡ ಎಸ್. ರವಿ, ಕಸ್ತೂರಿರಂಗನ್ ವರದಿಯಲ್ಲಿ ಹೆಚ್ಚುತ್ತಿರುವ ವನ್ಯಜೀವಿಗಳ ಸಂಖ್ಯೆಯನ್ನು ಉಲ್ಲೇಖಿಸಿಲ್ಲ ಅಥವಾ ಪರಿಗಣಿಸಿಲ್ಲ ಎಂದು ಹೇಳಿದರು. ಇದೇ ವೇಳೆ ಮನುಷ್ಯ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿರುವುದನ್ನೂ ಅವರು ಪ್ರಸ್ತಾಪಿಸಿದರು.
ಅರಣ್ಯ ಪ್ರದೇಶಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳಿಗೆ ಅಗತ್ಯವಿರುವ ಹಲವು ಅನುಮತಿಗಳನ್ನು ಪಡೆಯುವುದು ಕಷ್ಟವಾಗುತ್ತಿದೆ. ಈ ವಿಚಾರದಲ್ಲಿ ಅರಣ್ಯ ಪ್ರದೇಶಗಳನ್ನೇ “ನಿಜವಾದ ಶತ್ರುಗಳು” ಎಂದು ಟೀಕಿಸಿದರು.
ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ವರದಿಯ ಕೆಲವು ಅಂಶಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಕೆಲವು ಅಂಶಗಳನ್ನು ಒಪ್ಪಿಕೊಂಡಿಲ್ಲ. ಅವುಗಳಲ್ಲಿ ಬದಲಾವಣೆ ಮಾಡುವಂತೆ ಮನವಿ ಮಾಡಿದೆ ಎಂದು ಹೇಳಿದರು.
ಪಶ್ಚಿಮ ಘಟ್ಟಗಳು ಹಾಗೂ ಅಲ್ಲಿನ ಜೀವ ವೈವಿಧ್ಯವನ್ನು ಸಂರಕ್ಷಿಸುವುದರ ಜೊತೆಗೆ ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗದಂತೆ ಹಾಗೂ ಈಗಾಗಲೇ ಇರುವ ಕೃಷಿ ಭೂಮಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರದ ಅಧಿಸೂಚನೆಗೆ ರಾಜ್ಯ ಸರ್ಕಾರ ಈಗಾಗಲೇ ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿದೆ ಎಂದು ಯತೀಂದ್ರ ಹೇಳಿದಾಗ, ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಾಗಿದ್ದರೆ ವಿಶೇಷ ಅಧಿವೇಶನವನ್ನು ಏಕೆ ಕರೆಯಲಾಯಿತು ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಯತೀಂದ್ರ, ಸರ್ಕಾರ ಇನ್ನೂ ಹೆಚ್ಚಿನ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಪ್ರತಿಪಕ್ಷ ಸದಸ್ಯರ ಅಭಿಪ್ರಾಯಗಳನ್ನು ಪಡೆಯುವ ಉದ್ದೇಶದಿಂದಲೇ ಈ ಅಧಿವೇಶನವನ್ನು ಕರೆಯಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



