'ಗ್ಯಾರೆಂಟಿ ಸರ್ಕಾರದಲ್ಲಿ ಮಕ್ಕಳ ಶೂಗಿಲ್ಲ ವಾರಂಟಿ; ಬಡ ಮಕ್ಕಳ ಕಣ್ಣೀರು-ಹೆತ್ತವರ ಶಾಪವೇ ಈ ಭ್ರಷ್ಟ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆ..!'
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಲಾಗಿದೆ.

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂಗಳ ಗುಣಮಟ್ಟ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ, “ಗ್ಯಾರೆಂಟಿ ಸರ್ಕಾರದಲ್ಲಿ ಮಕ್ಕಳ ಶೂಗಿಲ್ಲ ವಾರಂಟಿ” ಎಂದು ಟೀಕಿಸಿದ್ದಾರೆ.
ಶಾಲಾ ಮಕ್ಕಳ ಶೂ ಖರೀದಿಯಲ್ಲೂ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಬೆಡಸಗಾಂವ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಜೊತೆಗೆ ಬಡ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶೂಗಳ ಗುಣಮಟ್ಟವೂ ಕಳಪೆಯಾಗಿದೆ ಎಂದು ಹೇಳಿದ್ದಾರೆ.
ತೊಡಲು ಯೋಗ್ಯವಲ್ಲದ ಶೂಗಳನ್ನು ನೀಡಲಾಗಿದೆ ಎಂದು ಆರೋಪಿಸಿ ಶಾಲಾ ಮಕ್ಕಳು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಪೋಷಕರು ಆ ಶೂಗಳನ್ನು ಶಾಲೆಯ ಮುಂಭಾಗದಲ್ಲೇ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡವರು ಹಾಗೂ ಹಿಂದುಳಿದವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಶೂಗಳಲ್ಲೂ ಕಮಿಷನ್ ಆರೋಪ ಕೇಳಿಬರುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ. ಅಲ್ಲದೆ, ಕಳಪೆ ಶೂ ಪೂರೈಕೆ ಮಾಡಿರುವ ಗುತ್ತಿಗೆದಾರರನ್ನು ತಕ್ಷಣ ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ಕಮಿಷನ್ ದಂಧೆಯಲ್ಲಿ ಭಾಗಿಯಾಗಿರುವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಇತರ ಜವಾಬ್ದಾರರ ವಿರುದ್ಧ ತಕ್ಷಣ ತನಿಖೆ ನಡೆಸಿ, ತಪ್ಪಿತಸ್ಥರೆಂದು ಕಂಡುಬಂದರೆ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶೂಗಳನ್ನು ತಕ್ಷಣ ಪೂರೈಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



