ಗ್ಯಾರಂಟಿ ಯೋಜನೆಗಳಿಗೆ ಭಾರೀ ವೆಚ್ಚ; 'ಆರ್ಥಿಕ ಹೊರೆ ಇದೆ, ಆದರೂ ನಿಭಾಯಿಸುತ್ತೇವೆ': ರಾಜ್ಯ ಸರ್ಕಾರ
2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗಲೇ ಅವುಗಳಿಂದ ಉಂಟಾಗುವ ಆರ್ಥಿಕ ಪರಿಣಾಮದ ಬಗ್ಗೆ ಲೆಕ್ಕ ಹಾಕಲಾಗಿತ್ತು.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಿಗೆ ರಾಜ್ಯದಲ್ಲಿ ಭಾರೀ ಪ್ರಮಾಣದ ಹಣ ವ್ಯಯವಾಗುತ್ತಿದ್ದು, ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಒಪ್ಪಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತವಾಗಿ 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ವೆಚ್ಚವಾಗುತ್ತಿದೆ. “ಆರ್ಥಿಕ ಹೊರೆ ಇದೆ, ಅದನ್ನು ಮುಚ್ಚಿಡಲು ಸಾಧ್ಯವಿಲ್ಲ. ಆದರೆ ಮೂರು ವರ್ಷಗಳನ್ನು ನಿಭಾಯಿಸಿದ್ದೇವೆ, ಉಳಿದ ಎರಡು ವರ್ಷಗಳನ್ನೂ ನಿಭಾಯಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗಲೇ ಅವುಗಳಿಂದ ಉಂಟಾಗುವ ಆರ್ಥಿಕ ಪರಿಣಾಮದ ಬಗ್ಗೆ ಲೆಕ್ಕ ಹಾಕಲಾಗಿತ್ತು. ನಾವು 52,000 ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ ಎಂದರೆ ಸಹಜವಾಗಿಯೇ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಬೀಳುತ್ತದೆ. ಅದನ್ನು ಮುಚ್ಚಿಡಲು ಸಾಧ್ಯವಿಲ್ಲ. ಆದರೆ ನಾವು ಅದನ್ನು ನಿಭಾಯಿಸುತ್ತಿದ್ದೇವೆಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಗೆ ಸುಮಾರು 45,000 ಕೋಟಿ ರೂಪಾಯಿ ವೆಚ್ಚವಾಗಬಹುದು ಎಂದು ಆರಂಭದಲ್ಲೇ ಅಂದಾಜಿಸಲಾಗಿತ್ತು. ಆದರೆ, ಇದೀಗ ವೆಚ್ಚ 50,000 ಕೋಟಿ ರೂಪಾಯಿ ದಾಟಿದೆ. ಇದನ್ನು ನಿಭಾಯಿಸಬೇಕಿದೆ ಮತ್ತು ನಿಭಾಯಿಸುತ್ತೇವೆ ಎಂದು ತಿಳಿಸಿದರು.
ಹಿರಿಯ ನಾಗರಿಕರ ಪಿಂಚಣಿ ಕುರಿತು ಮಾತನಾಡಿ, ಆದಾಯದ ಮಿತಿಯನ್ನು 32,000 ರೂಪಾಯಿಯಿಂದ 1.2 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಈ ಹಿಂದೆ ರಾಜ್ಯ ಸರ್ಕಾರ ಸುಮಾರು 23 ಲಕ್ಷ ಮಂದಿಯ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು. ಇದೀಗ ಪರಿಷ್ಕೃತ ಆದಾಯ ಮಿತಿಯಿಂದ ಅವರಲ್ಲಿ ಹಲವರು ಮತ್ತೆ ಪಿಂಚಣಿಗೆ ಅರ್ಹರಾಗಲಿದ್ದಾರೆ. ಸರಿಯಾದ ದಾಖಲೆಗಳನ್ನು ಸಲ್ಲಿಸದವರು, ವಯೋಮಿತಿ ಪೂರೈಸದ ಅರ್ಜಿದಾರರು ಸೇರಿದಂತೆ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಲಾಗುವುದು ಎಂದು ಹೇಳಿದರು.
ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಗಳನ್ನು ಜಾರಿಗೆ ತರುವ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರದ ಅವಧಿ ಮುಗಿಯಲು ಇನ್ನೂ ಸುಮಾರು ಒಂದೂವರೆ ವರ್ಷ ಬಾಕಿ ಇದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈ ಅವಧಿ ಸಾಕಷ್ಟಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಕುರಿತು ಪ್ರತಿಕ್ರಿಯಿಸಿ, ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಪಕ್ಷದ ವರಿಷ್ಠ ನಾಯಕರು ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ಬರ ಪರಿಸ್ಥಿತಿಗೆ ಸಂಬಂಧಿಸಿದ ವಿಷಯಗಳನ್ನು ನೋಡಿಕೊಳ್ಳುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಅವರು ಭೇಟಿಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆಗೆ, ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.
ನಿಗಮ-ಮಂಡಳಿಗಳಿಗೆ ನೇಮಕಾತಿ ಕುರಿತು ಮಾತನಾಡಿದ ಅವರು, ಪಕ್ಷದ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಮತ್ತು ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ನಿರ್ದೇಶಕರ ನೇಮಕಾತಿ ಪ್ರಕ್ರಿಯೆಗಳು ಪ್ರತ್ಯೇಕವಾಗಿವೆ ಎಂದು ಸ್ಪಷ್ಟಪಡಿಸಿದರು.
ಬಿಡದಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿ ಜಮೀನು ಕಳೆದುಕೊಂಡವರ ಪರವಾಗಿ ಹೋರಾಟ ನಡೆಸುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, “ಅವರು ತಮ್ಮ ಹೋರಾಟವನ್ನು ನಡೆಸಲು ಸ್ವತಂತ್ರರು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



