ಕಣಿವೆಯಲ್ಲಿ ಸರ್ಕಾರ ರಚನೆ ಕಸರತ್ತು: ಬಿಜೆಪಿಯಲ್ಲಿ ಬಿರುಕು?

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಅಧಿಕಾರದ ಗುದ್ದುಗೆ ಹಿಡಿಯಲು ಹವಣಿಸುತ್ತಿರುವ ಬಿಜೆಪಿ ಶಾಸಕರು ಇಬ್ಭಾಗವಾಗಿದ್ದಾರೆ.
ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎನ್ನುವ ವಿಚಾರದ ಕುರಿತು ಭಿನ್ನಾಭಿಪ್ರಾಯ ಭುಗಿಲೆದಿದ್ದು, ಕೆಲ ಶಾಸಕರು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪರವಿದ್ದರೆ ಮತ್ತೆ ಕೆಲ ಶಾಸಕರು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (ಪಿಡಿಪಿ)ದ ಪರ ಒಲವು ತೋರಿದ್ದಾರೆ. ಹೀಗಾಗಿ ಕಾಶ್ಮೀರ ಬಿಜೆಪಿ ಇದೀಗ ಎರಡು ಗುಂಪಾಗಿ ಮಾರ್ಪಾಟಾಗಿದ್ದು, ಕೇಂದ್ರ ನಾಯಕರು ಈ ಬಗ್ಗೆ ತಲೆ ಬಿಸಿ ಮಾಡಿಕೊಂಡಿದ್ದಾರೆ.
ಹೀಗಾಗಿಯೇ ಪಕ್ಷದ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಗೂ ರಾಮ್ ಮಾಧವ್ ಅವರು ಪ್ರಸ್ತುತ ಶ್ರೀನಗರದಲ್ಲಿ ಮೊಕ್ಕಾಂ ಹೂಡಿದ್ದು, ಪಕ್ಷದಿಂದ ಆರಿಸಿ ಬಂದಿರುವ ಎಲ್ಲಾ 25 ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ ಅಲ್ಲದೆ ಎಲ್ಲ ಶಾಸಕರ ಅಭಿಪ್ರಾಯವನ್ನು ಸಂಗ್ರಹಸುತ್ತಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಜೆಪಿ ಉಸ್ತುವಾರಿ ಮುಖಂಡ ರಮೇಶ್ ಅರೋರಾ ಅವರು, 'ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ. ಶಾಸಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸ್ವತಂತ್ರರಾಗಿದ್ದಾರೆ. ಕೇಂದ್ರ ನಾಯಕರು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಸರ್ಕಾರ ರಚನೆ ಮಾಡುವ ಕುರಿತು ಚರ್ಚೆ ನಡೆಸುತ್ತಿದ್ದಾರೆ' ಎಂದು ಹೇಳಿದರು.
ಆದರೆ ನಿರ್ಗಮಿತ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ತಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಘೋಷಣೆ ಮಾಡಿದ್ದು, ಅದಾಗ್ಯೂ ಕೆಲ ಬಿಜೆಪಿ ಶಾಸಕರೇಕೆ ಆ ಪಕ್ಷದೊಂದಿಗೆ ಮೈತ್ರಿಗೆ ಮುಂದಾಗಿದ್ದಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಆದರೆ ರಾಜಕೀಯ ಪಂಡಿತರ ಲೆಕ್ಕಾಚಾರದ ಪ್ರಕಾರ, ಬಿಜೆಪಿ ತನಗಿಂತಲೂ ಅಧಿಕ ಸ್ಥಾನಗಳಿಸರುವ ಪಿಡಿಪಿ ಪಕ್ಷದೊಂದಿಗೆ ಮೈತ್ರಿಗೆ ಮುಂದಾದರೇ ಸಾಮಾನ್ಯವಾಗಿಯೇ ಪಿಡಿಪಿ ಮುಖ್ಯಮಂತ್ರಿ ಸ್ಥಾನಬೇಕು ಎಂದು ಕೇಳುತ್ತದೆ. ಅದೇ ಬಿಜೆಪಿಗಿಂತಲೂ ಕಡಿಮೆ ಸ್ಥಾನಗಳನ್ನು ಹೊಂದಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೇ ಮುಖ್ಯಮಂತ್ರಿ ಸ್ಥಾನ ದಕ್ಕುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಶಾಸಕರು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದತ್ತ ತಮ್ಮ ಒಲವು ತೋರುತ್ತಿರಬಹುದು.
ಆದರೆ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬ ವಿಚಾರದಲ್ಲಿ ಕೇಂದ್ರ ನಾಯಕ ನಿರ್ಣಯವೇ ಅಂತಿಮವಾಗಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


