ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 11 ಮಂದಿ ಸಾವು
ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಕನಿಷ್ಠ ಹನ್ನೊಂದು ಪ್ರಯಾಣಿಕರು ಮೃತಪಟ್ಟಿದ್ದು, 50 ಮಂದಿಗೆ ಗಾಯಗಳಾಗಿವೆ.

ಬುರ್ದ್ವಾನ್: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಕನಿಷ್ಠ ಹನ್ನೊಂದು ಪ್ರಯಾಣಿಕರು ಮೃತಪಟ್ಟಿದ್ದು, 50 ಮಂದಿಗೆ ಗಾಯಗಳಾಗಿವೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಬುರ್ದ್ವಾನ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುರ್ದ್ವಾನ್-ಕತ್ವಾ ಹೆದ್ದಾರಿಯ ದೇವಾಂದಿಘಿ ಬಳಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 11 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೆ ಸುಮಾರು 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಸ್ ನಲ್ಲಿ ಸುಮಾರು 70 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಖುಡ್ಕುರಿ ಗ್ರಾಮದಿಂದ ಪ್ರಯಾಣಿಕರನ್ನು ಹೊತ್ತೊಯ್ದ ಬಸ್ ನಾಡಿಯಾ ಜಿಲ್ಲೆಯಾ ಮಾಯಾಪುರ ಗ್ರಾಮಕ್ಕೆ ತೆರಳುತ್ತಿತ್ತು. ಈ ವೇಳೆ ಮೂರು ಖಾಸಗಿ ಬಸ್ ಗಳು ಒಮ್ಮೆಲೆ ಹಿಂದಿಕ್ಕಲು ಯತ್ನಿಸಿದಾಗ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು, ಬಸ್ ಅಪಘಾತಕ್ಕೀಡಾಗಿದೆ. ಸ್ಥಳದಲ್ಲಿಯೇ 10 ಮಂದಿ ಸಾವಿಗೀಡಾಗಿದ್ದು, ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಮತ್ತೋರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಮತ್ತು ಆಂಬುಲೆನ್ಸ್ ಗಳು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಾಯಾಳುಗಳನ್ನು ಬುರ್ದ್ವಾನ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


