ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಮಸಾರತ್ ಆಲಂ ಬಿಡುಗಡೆ, ಪ್ರಧಾನಿ ಸ್ಪಷ್ಟನೆಗೆ ಪ್ರತಿಪಕ್ಷಗಳ ಒತ್ತಾಯ
ಮುಸ್ಲಿಂ ಲೀಗ್ ಹಾಗೂ ಕಾಶ್ಮೀರಿ ಪ್ರತ್ಯೇಕವಾದಿ ಮುಖಂಡ ಮಸಾರತ್ ಆಲಂ ಬಿಡುಗಡೆ ವಿಚಾರ ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.

ನವದೆಹಲಿ: ಮುಸ್ಲಿಂ ಲೀಗ್ ಹಾಗೂ ಕಾಶ್ಮೀರಿ ಪ್ರತ್ಯೇಕವಾದಿ ಮುಖಂಡ ಮಸಾರತ್ ಆಲಂ ಬಿಡುಗಡೆ ವಿಚಾರ ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.
ಇಂದು ಕಲಾಪ ಆರಂಭವಾಗುತ್ತಿದಂತೆ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು, ಪ್ರಶ್ನೋತ್ತರ ಕಲಾಪ ರದ್ದುಪಡಿಸಿ, ಆಲಂ ಬಿಡುಗಡೆ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ನಿಲುವಳಿ ಸೂಚನೆ ಮಂಡಿಸಿದರು. ಆದರೆ ನಿಲುವಳಿ ಸೂಚನೆ ತಿರಸ್ಕರಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮಧ್ಯಾಹ್ನ 12 ಗಂಟೆಗೆ ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು.
ಜಮ್ಮು ಮತ್ತು ಕಾಶ್ಮೀರ ಸರ್ಕಾರ ಆಲಂ ಬಿಡುಗಡೆ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ. ಅಲ್ಲದೆ ಈ ಕುರಿತು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿಸಿದರು.
ಪ್ರತ್ಯೇಕವಾದಿಯನ್ನು ಬಿಡುಗಡೆ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ ಖರ್ಗೆ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೇ ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು ರಾಜ್ಯಸಭೆಯಲ್ಲೂ ಪ್ರತ್ಯೇಕವಾದಿಯ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದವು.
ಕಾಂಗ್ರೆಸ್ ಪರ ವಿಷಯ ಪ್ರಸ್ತಾಪಿಸಿದ ಆನಂದ್ ಶರ್ಮಾ ಅವರು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟಿಕರಣ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಬಿಎಸ್‌ಪಿ ನಾಯಾಕಿ ಮಾಯಾವತಿ ಹಾಗೂ ಜೆಡಿಯುನ ಶರದ್ ಯಾದವ್ ಅವರು ಧ್ವನಿಗೂಡಿಸಿದರು.
ಈ ವೇಳೆ ಮಾತನಾಡಿದ ರಾಜ್ಯಸಭಾ ನಾಯಕ ಅರುಣ್ ಜೇಟ್ಲಿ ಅವರು, ದೇಶದ ಸುರಕ್ಷತೆ ವಿಷಯದಲ್ಲಿ ನಾವು ಯಾವದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಅಲ್ಲದೆ ಈ ಬಗ್ಗೆ ಕೇಂದ್ರ ಗೃಹ ಸಚಿವರು ಸ್ಪಷ್ಟಿಕರಣ ನೀಡಲಿದ್ದಾರೆ ಎಂದು ಸದನಕ್ಕೆ ತಿಳಿಸಿದರು. ಆದರೆ ಇದಕ್ಕೆ ಒಪ್ಪದ ಪ್ರತಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


