ಶೀನಾ ಬೋರಾ ಹತ್ಯೆ: ಸಿಬಿಐ ತನಿಖೆಗೆ "ಮಹಾ" ನಿರ್ಧಾರ
ಭಾರಿ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಲು ಶುಕ್ರವಾರ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮುಂಬೈ: ಭಾರಿ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಲು ಶುಕ್ರವಾರ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಇಡೀ ದೇಶದ ಗಮನ ಸೆಳೆದಿದ್ದ ಮಾಧ್ಯಮ ಉದ್ಯಮಿ ಇಂದ್ರಾಣಿ ಮುಖರ್ಜಿ ಅವರ ಮಗಳಾದ ಶೀನಾ ಬೋರಾ ಹತ್ಯಾ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಬಿಐಗೆ ವಹಿಸಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸರ್ಕಾರದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆಪಿ ಬಕ್ಷಿ ಅವರು, ಶೀನಾ ಬೋರಾ ಹತ್ಯಾ ಪ್ರಕರಣ ಸಾಮಾನ್ಯ ಪ್ರಕರಣದಂತಿಲ್ಲ. ಪ್ರಕರಣದಲ್ಲಿ ವಾಣಿಜ್ಯಾತ್ಮಕ ಸಂಪರ್ಕಗಳು ಕೂಡಿರುವ ಸಾಧ್ಯತೆಗಳಿವೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಕರಣದ ತನಿಖೆಯ ಜವಾಬ್ದಾರಿ ಸಂಪೂರ್ಣ ಸಿಬಿಐ ಅಧಿಕಾರಿಗಳಿಗೆ ವಹಿಸಲಾಗುತ್ತಿದ್ದು, ರಾಜ್ಯ ಸರ್ಕಾರದ ಯಾವುದೇ ಅಧಿಕಾರಿಯೂ ಕೂಡ ತನಿಖೆಯಲ್ಲಿ ತೊಡಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶೀಘ್ರದಲ್ಲಿಯೇ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೇಂದ್ರ ಸರ್ಕಾರವನ್ನು ನಾವು ಮನವಿ ಮಾಡಲಿದ್ದೇವೆ. ಕೇಂದ್ರ ಗೃಹ ಇಲಾಖೆಯಿಂದ ಒಪ್ಪಿದೆ ದೊರೆತ ಬಳಿಕ ಪ್ರಕರಣವನ್ನು ಸಿಬಿಐ ಅಧಿಕಾರಿಗಳಿಗೆ ಹಸ್ತಾಂತರಿಸುತ್ತೇವೆ ಎಂದು ಬಕ್ಷಿ ಹೇಳಿದರು.
ಶೀನಾ ಬೋರಾ ಹತ್ಯಾ ಪ್ರಕರಣ ಮೇಲುಸ್ತುವಾರಿ ವಹಿಸಿಕೊಂಡಿದ್ದ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮಾರಿಯಾ ಆರೋಪಿ ಇಂದ್ರಾಣಿ ಮುಖರ್ಜಿಗೆ ಪರಿಚಿತರಾಗಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲದೆ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಂತೆಯೇ ಮಹಾರಾಷ್ಟ್ರ ಸರ್ಕಾರ ರಾಕೇಶ್ ಮಾರಿಯಾ ಅವರನ್ನು ದಿಢೀರ್ ವರ್ಗಾವಣೆ ಮಾಡಿತ್ತು. ಸರ್ಕಾರದ ಈ ನಡೆ ವ್ಯಾಪಕ ಟೀಕೆಗೂ ಕಾರಣವಾಗಿತ್ತು. ಇದೀಗ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳ ಹಸ್ತಕ್ಷೇಪದ ಕುರಿತು ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


