ಪಶ್ಚಿಮ ಬಂಗಾಳ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಹಾಕಿ: ರಾಜನಾಥ ಸಿಂಗ್
ತೃಣಮೂಲ ಕಾಂಗ್ರೆಸ್ ಪಕ್ಷ ಜನರ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿಯಾಗಬೇಕಿದ್ದರೆ ಬಿಜೆಪಿಗೆ ಮತ...

ಪಶ್ಚಿಮ ಮಿಡ್ನಾಪುರ: ತೃಣಮೂಲ ಕಾಂಗ್ರೆಸ್ ಪಕ್ಷ ಜನರ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿಯಾಗಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಿಮಿತ್ತ ರ್ಯಾಲಿಯೊಂದರಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಕಮ್ಯುನಿಸ್ಟ್ ಪಕ್ಷಗಳಿಂದಾಗಿ ಇಲ್ಲಿನ ಜನತೆಯನ್ನು 35 ವರ್ಷಗಳಿಂದ ತಿರಸ್ಕರಿಸಲಾಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ರಾಜ್ಯದಲ್ಲಿ ಬದಲಾವಣೆ ತಂದು ಬಡತನವನ್ನು ನಿರ್ಮೂಲನೆ ಮಾಡುತ್ತೇವೆಂದು ಹೇಳಿತ್ತು. ಆದರೆ, ಈಗಲೂ ರಾಜ್ಯದಲ್ಲಿ ಹಿಂದಿನಂತೆಯೇ ಪರಿಸ್ಥಿತಿ ಇದೆ. ರಾಜ್ಯದ ಜನತೆ ಸಿಗಬೇಕಿರುವ ಸಾಕಷ್ಟು ಸೌಲಭ್ಯಗಳು ಅವರಿಗೆ ಸಿಗುತ್ತಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಮತ ಹಾಕಿ ನಾವು ರಾಜ್ಯದಲ್ಲಿ ಅಭಿವೃದ್ದಿ ತರುತ್ತೇವೆಂದು ಹೇಳಿದ್ದಾರೆ.
ಇದೇ ವೇಳೆ ಜನತೆಗೆ ಕೆಲವು ಪ್ರಶ್ನೆಗಳನ್ನು ಕೇಳಿರುವ ಅವರು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿಯಾಗಿದೆಯೇ?...ಕೃಷಿ ಕ್ಷೇತ್ರದಲ್ಲಿ ನೀರು, ಚಿಕಿತ್ಸೆಗಳಿಗೆ ಸೂಕ್ತ ಆಸ್ಪತ್ರೆ, ಉನ್ನತ ಶಿಕ್ಷಣ, ವಿದ್ಯುತ್ ಸರಿಯಾಗಿ ಸಿಗುತ್ತಿತ್ತೇ ಎಂದು ಕೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದ್ದು, ಅವರಿಗೆ ಮತ್ತೆ ಅಧಿಕಾರಕ್ಕೆ ಬರಲು ಹಕ್ಕಿದೆಯೇ? ಕಮ್ಯುನಿಸ್ಟ್ ಪಕ್ಷಗಳು ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರುವಂತೆ ಮಾಡಬೇಡಿ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆದಿದ್ದು, ಎರಡನೇ ಹಂತದ ಮತದಾನ ಏ,11 ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


