ಉತ್ತರಾಖಂಡ ರಾಜಕೀಯ ಬಿಕ್ಕಟ್ಟು ರಾಷ್ಟ್ರಪತಿ ಅಂಗಳಕ್ಕೆ
ಉತ್ತರಾಖಂಡ ರಾಜಕೀಯ ಬಿಕ್ಕಟ್ಟು ಇದೀಗ ರಾಷ್ಟ್ರಪತಿ ಅಂಗಳಕ್ಕೆ ಕಾಲಿಟ್ಟಿದ್ದು, ಇದೀಗ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ನೇತೃತ್ವದಲ್ಲಿ ಉತ್ತರಾಖಂಡದ ಬಿಜೆಪಿ...

ನವದೆಹಲಿ: ಉತ್ತರಾಖಂಡ ರಾಜಕೀಯ ಬಿಕ್ಕಟ್ಟು ಇದೀಗ ರಾಷ್ಟ್ರಪತಿ ಅಂಗಳಕ್ಕೆ ಕಾಲಿಟ್ಟಿದ್ದು, ಇದೀಗ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ನೇತೃತ್ವದಲ್ಲಿ ಉತ್ತರಾಖಂಡದ ಬಿಜೆಪಿ ಶಾಸಕರು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿದ್ದಾರೆಂದು ತಿಳಿದುಬಂದಿದೆ.
ವಿಜಯವರ್ಗೀಯ ಅವರ ನೇತೃತ್ವದಲ್ಲಿ ಈಗಾಗಲೇ ರಾಷ್ಟ್ರಪತಿಯವರನ್ನು ಭೇಟಿ ಮಾಡಿರುವ ಬಿಜೆಪಿ ಶಾಸಕರು ವಿಧಾನಸಭೆ ವಿಸರ್ಜನೆಗೆ ಮನವಿ ಮಾಡಿದ್ದಾರೆ. ಅಲ್ಲದೆ, ಬಹುಮತ ಸಾಬೀತುಪಡಿಸಲು ಸಮಯಾವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಆದರೆ, ರಾಷ್ಟ್ರಪತಿ ಭೇಟಿ ವೇಳೆ ಕಾಂಗ್ರೆಸ್ ಪಕ್ಷದ 9 ರೆಬೆಲ್ ಶಾಸಕರು ಭಾಗವಹಿಸಿರಲಿಲ್ಲ ಎಂದು ಹೇಳಲಾಗುತ್ತಿದೆ.
ರಾಷ್ಟ್ರಪತಿ ಭೇಟಿ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೈಲಾಶ್ ವಿಜಯವರ್ಗೀಯ ಅವರು, ಉತ್ತರಾಖಂಡ ಸರ್ಕಾರವನ್ನು ವಜಾಮಾಡುವಂತೆ ರಾಜ್ಯಪಾಲರಿಗೆ ನಿರ್ದೇಶಿಸಿ ಎಂದು ರಾಷ್ಟ್ರಪತಿಯವರಿಗೆ ಮನವಿ ಮಾಡಲಾಗಿದೆ. ಅಲ್ಲದೆ, ಬಹುಮತ ಸಾಬೀತು ಪಡಿಸಲು ಸಮಯಾವಕಾಶ ನೀಡುವಂತೆ ರಾಜ್ಯಪಾಲರಿಗೆ ಸೂಚಿಸಿ ಎಂದು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇದರಂತೆ ಕಾಂಗ್ರೆಸ್ ಹಿರಿಯ ನಾಯಕರಾದ ಮೋಟಿಲಾಲ್ ವೋರಾ ಮತ್ತು ಮಾಜಿ ರಕ್ಷಣಾ ಸಚಿವ ಎ.ಕೆ. ಆ್ಯಂಟನಿ ಅವರೂ ಕೂಡ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಯವರನ್ನು ಭೇಟಿಯಾಗಿದ್ದು, ಉತ್ತರಾಖಂಡ ಬಿಕ್ಕಟ್ಟು ಪರಿಸ್ಥಿತಿ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಈ ಕುರಿತಂತೆ ಮಾತನಾಡಿರುವ ಗುಲಾಂ ನಬಿ ಆಜಾದ್ ಅವರು, ರಾಜ್ಯ ಪರಿಸ್ಥಿತಿ ಕುರಿತಂತೆ ಹಾಗೂ ಬಿಜೆಪಿಯು ಕೇಂದ್ರ ಸರ್ಕಾರದ ಸಹಾಯ ಪಡೆದು ರಾಜ್ಯದಲ್ಲಿರುವ ಪ್ರತಿಪಕ್ಷಗಳನ್ನು ಕೆಡವಲು ಯತ್ನಿಸುತ್ತಿದೆ. ಪ್ರಮುಖವಾಗಿ ಕಾಂಗ್ರೆಸ್ ಪಕ್ಷವನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಎಂಬುದರ ಕುರಿತಂತೆ ರಾಷ್ಟ್ರಪತಿಯವರಿಗೆ ತಿಳಿಸಲಾಗಿದೆ. ಅಲ್ಲದೆ, ಮಾರ್ಚ್ 28 ರಂದು ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಹುಮತ ಸಾಬೀತು ಪಡಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಬಿಜೆಪಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಬಿಜೆಪಿಯವರು ಸುಳ್ಳುಗಳನ್ನು ಹೇಳುತ್ತಿದ್ದು, ರಾಜ್ಯದ ರಾಜಕೀಯ ಬಿಕ್ಕಟ್ಟನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಯತ್ನಿಸುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ರಾಜ್ಯದಲ್ಲಿರುವ ಪ್ರತಿಪಕ್ಷಗಳ ಮೇಲೆ ತನ್ನ ಶಕ್ತಿಯನ್ನು ಉಪಯೋಗಿಸಿ ಉತ್ತರಾಖಂಡ್ ನ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಯತ್ನಿಸುತ್ತಿದೆ. ಬಿಜೆಪಿಯ ಹುಸಿ ರಾಷ್ಟ್ರೀಯವಾದಿಗಳು ಇಂದು ರಾಷ್ಟ್ರೀಯತೆಯ ಗುತ್ತಿಗೆದಾರರಾಗಿ ಮಾರ್ಪಡಾಗುತ್ತಿದ್ದಾರೆಂದು ಹೇಳಿದ್ದರು.
ರಾಜ್ಯದ ಬಿಕ್ಕಟ್ಟು ಕುರಿತಂತೆ ಉತ್ತರಾಖಂಡ ರಾಜ್ಯದ ರಾಜ್ಯಪಾಲ ಕೆ.ಕೆ. ಪೌಲ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದು, ಪತ್ರದಲ್ಲಿ ರಾಜ್ಯದಲ್ಲಿ ಆಡಳಿತಾತ್ಮಕ ಕುಸಿತವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ. ಮಾ.18 ರಂದು ರಾಜ್ಯ ವಿಧಾನಸಭೆಯಲ್ಲಿ ನಡೆದ ಘಟೆಯ ಸಿಡಿಯನ್ನು ಪತ್ರದ ಜೊತೆಗೆ ಕಳುಹಿಸಿಕೊಟ್ಟಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


