ನಿತೀಶ್ ಕುಮಾರ್ ಹೇಳಿಕೆಗೆ ಬಿಜೆಪಿ ತಿರುಗೇಟು
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರವರ ಆಡಳಿತದಲ್ಲಿ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದ್ದು...

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರವರ ಆಡಳಿತದಲ್ಲಿ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದ್ದು, ತಕ್ಷಣವೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಈ ಹಿಂದೆ ಸ್ನೇಹಿತರಾಗಿದ್ದು, ನಂತರ ಶತ್ರುಗಳಾದ ಬಿಜೆಪಿ ಮತ್ತು ಜೆಡಿ(ಯು)ನ ಸಂಬಂಧ ಮತ್ತಷ್ಟು ಹದಗೆಡುತ್ತಿದೆ. ನಿತೀಶ್ ಕುಮಾರ್ ಅವರು ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜನೆ ಹಾಕಿಕೊಂಡಿದ್ದಾರೆ. ಪ್ರಧಾನಿ ಮೋದಿಯವರ ಸ್ವಕ್ಷೇತ್ರ ವಾರಣಾಸಿಯಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ನಿತೀಶ್ ಕುಮಾರ್, ಬಿಜೆಪಿ ನಾಯಕರು ರಾಷ್ಟ್ರೀಯತೆ ಬಗ್ಗೆ ಮಾತನಾಡುತ್ತಾರೆ. ಆದರೆ ಬಿಜೆಪಿಯ ಹಿರಿಯ ನಾಯಕರು ಮತ್ತು ಆರ್ ಎಸ್ ಎಸ್ ನಮ್ಮ ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಯಾವ ಪಾತ್ರವನ್ನೂ ವಹಿಸಿಲ್ಲ ಎಂದು ಹೇಳಿದ್ದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ಬಿಜೆಪಿ, ಬಿಹಾರದಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ಜೆಡಿಯು ಮುಖಂಡನ ಪುತ್ರ ಯುವಕನೊಬ್ಬನನ್ನು ಕೊಲೆ ಮಾಡಿರುವಂಥ ಪ್ರಕರಣಗಳನ್ನು ನೋಡಿದರೆ ಬಿಹಾರದಲ್ಲಿ ಎಂತಪ ಪರಿಸ್ಥಿತಿಯಿದೆ ಎಂದು ಅರಿತುಕೊಳ್ಳಬಹುದು. ನೈತಿಕ ಆಧಾರದ ಮೇಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ತಮ್ಮ ಪಕ್ಷದ ಶಾಸಕರನ್ನು ಹದ್ದುಬಸ್ತಿನಲ್ಲಿಡಲು ನಿತೀಶ್ ಕುಮಾರ್ ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಿರುವಾಗ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಹೇಗೆ ಕಾಪಾಡಬಹುದು. ಹಾಗಾಗಿ ಈ ತಕ್ಷಣವೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದರ್ ಯಾದವ್ ಒತ್ತಾಯಿಸಿದರು.
ಜೆಡಿ(ಯು) ಮತ್ತು ಅದರ ಮೈತ್ರಿ ಪಕ್ಷಗಳಾದ ಆರ್ ಜೆಡಿ ಕೂಡ ಅಪರಾಧಗಳಲ್ಲಿ ಶಾಮೀಲಾಗಿದೆ. ಬಿಜೆಪಿ, ಎಲ್ ಜೆಪಿ ನಾಯಕರ ಕೊಲೆಯಾಗಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಿಲ್ಲ. ನಿತೀಶ್ ಕುಮಾರ್ ಅವರು ಮೊದಲು ಬಿಹಾರ ರಾಜ್ಯವನ್ನು ನೋಡಿಕೊಳ್ಳಲಿ. ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಬಾಲಿಶ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಲಿ ಎಂದು ಯಾದವ್ ಹೇಳಿದರು.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ್ ಶರ್ಮ ಮಾತನಾಡಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಯಾವುದಾದರೂ ಅಹಿತಕರ ಘಟನೆಗಳು ನಡೆದರೆ ಅಲ್ಲಿಗೆ ಭೇಟಿ ನೀಡುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಿಹಾರದಲ್ಲಿ ಯುವಕನ ಕೊಲೆ ಬಗ್ಗೆ ಮಾತನಾಡಿಲ್ಲ ಏಕೆ ಎಂದು ಕೇಳಿದರು.
ಆದಿತ್ಯ ಸಚ್ ದೇವ್ ಎಂಬ ಕೊಲೆಯಾದ ಯುವಕನ ರಕ್ತ ಪೀಡಿತ ಬಟ್ಟೆಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಪೊಲೀಸರು ಅಮಾನತುಗೊಂಡು ನಾಪತ್ತೆಯಾಗಿರುವ ವಿಧಾನ ಪರಿಷತ್ ಸದಸ್ಯೆ ಮನೋರಮಾ ದೇವಿ ಅವರಿಗಾಗಿ ಗಯಾ, ನವಾಡಾ, ಪಾಟ್ನಾ ಮೊದಲಾದ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಈಕೆಯ ಪುತ್ರ ರಾಕಿ ಕಳೆದ ಶನಿವಾರ ಕಾರಿನಲ್ಲಿ ಓವರ್ ಟೇಕ್ ಮಾಡಿದ್ದಕ್ಕೆ ಯುವಕನೊಬ್ಬನನ್ನು ಹತ್ಯೆ ಮಾಡಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


