ನ್ಯಾಯಾಧಿಕರಣದ ಹೊರಗೆ ಮಹದಾಯಿ ಚರ್ಚೆಗೆ "ಮಹಾ" ಸಿಎಂ ಅಹ್ವಾನ!
ಕರ್ನಾಟಕ ಮತ್ತು ಗೋವಾ ರಾಜ್ಯಗಳ ಕಾನೂನು ಹೋರಾಟಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.

ಮುಂಬೈ: ಕರ್ನಾಟಕ ಮತ್ತು ಗೋವಾ ರಾಜ್ಯಗಳ ಕಾನೂನು ಹೋರಾಟಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.
ಉಭಯ ರಾಜ್ಯಗಳ ರೈತರ ಹೋರಾಟಕ್ಕೆ ಕಾರಣವಾಗಿರುವ ವಿವಾದ ಸಂಬಂಧ ತಮ್ಮ ಮಧ್ಯಸ್ಥಿಕೆಯಲ್ಲಿ ಚರ್ಚಿಸಲು ಇದೇ ಅಕ್ಟೋಬರ್ 21ರಂದು ಮುಂಬೈನಲ್ಲಿ ಸಭೆ ಏರ್ಪಡಿಸಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ದೇವೇಂದ್ರ ಫಡ್ನವಿಸ್ ಅವರು ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಈ ಪತ್ರದಲ್ಲಿ ತಾವು ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರೊಂದಿಗೆ ಮಾತನಾಡಿದ್ದು, ಅವರು ಕೂಡ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ ಎಂದು ಫಡ್ನವಿಸ್ ಪತ್ರದಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ನೀರಾವರಿ ಸಚಿವ ಎಂಬಿ ಪಾಟೀಲ್ ಅವರು, ದೇವೇಂದ್ರ ಫಡ್ನವಿಸ್ ಅವರಿಂದ ಪತ್ರ ಬಂದಿರುವುದು ನಿಜ. ಪತ್ರ ಸಂಬಂಧ ರಾಜ್ಯ ಸರ್ಕಾರ ಕೂಡ ಪ್ರತಿಕ್ರಿಯೆ ರವಾನಿಸಿದ್ದು, ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ ಎಂದು ಹೇಳಿದರು.
ಈ ಹಿಂದೆ ಮಹದಾಯಿ ವಿವಾದ ಸಂಬಂಧ ಜೆಎಂ ಪಾಂಚಾಲ್ ನೇತೃತ್ವ ಮಹದಾಯಿ ನ್ಯಾಯಾಧಿಕರಣ ಮೂರು ರಾಜ್ಯಗಳ ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಅದರಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕೂಡ ಗೋವಾ ಸಿಎಂಗೆ ಪತ್ರಬರೆದು ವಿವಾದ ಸಂಬಂಧ ಚರ್ಚೆ ನಡೆಸುವ ಕುರಿತು ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


