ಭಾನುವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ!
ಮಹತ್ವದ ಬೆಳವಣಿಗೆಯಲ್ಲಿ ಕಳೆದ ಸಾಕಷ್ಟು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ ಇದೀಗ ದಿಢೀರ್ ಚುರುಕು ಪಡೆದುಕೊಂಡಿದ್ದು, ಇದೇ ಭಾನುವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಹೇಳಲಾಗುತ್ತಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಳೆದ ಸಾಕಷ್ಟು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ ಇದೀಗ ದಿಢೀರ್ ಚುರುಕು ಪಡೆದುಕೊಂಡಿದ್ದು, ಇದೇ ಭಾನುವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಹೇಳಲಾಗುತ್ತಿದೆ.
ಈ ನಿಟ್ಟಿನಲ್ಲಿ ಇಂದು ದೆಹಲಿಯಲ್ಲಿ ಬಿಜೆಪಿ ಸಂಸದರ ಮಹತ್ವದ ಸಭೆ ನಡೆಯುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸಭೆಯ ನೇತೃತ್ವ ವಹಿಸಿದ್ದಾರೆ. ಸಭೆಯಲ್ಲಿ ಕೇಂದ್ರ ವಿತ್ತ ಸಚಿವ ಅರುಣೇ ಜೇಟ್ಲಿ, ಅನಂತ ಕುಮಾರ್ ಸೇರಿದಂತೆ ಬಿಜೆಪಿಯ ಹಲವು ಸಂಸದರು ಹಾಗೂ ಸಚಿವರು ಪಾಲ್ಗೊಂಡಿದ್ದರು. ಮೂಲಗಳ ಪ್ರಕಾರ ಈ ಹಿಂದೆ ಕೆಲ ಸಚಿವರು ಕಾರಣಾಂತರಗಳಿಂದ ತಮ್ಮ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಹೀಗಾಗಿ ಅವರ ಖಾತೆಗಳನ್ನು ಜೇಟ್ಲಿ ಸೇರಿದಂತೆ ಇತರೆ ಸಚಿವರಿಗೆ ಹೆಚ್ಚುವರಿಯಾಗಿ ಹೊಣೆಗಾರಿಕೆ ನೀಡಲಾಗಿತ್ತು.
ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದ್ದು, ಇದೇ ಭಾನುವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಹೇಳಲಾಗಿದೆ. ಇದಕ್ಕೆ ಇಂಬು ನೀಡುವಂತೆ ರಕ್ಷಣಾ ಇಲಾಖೆಯ ಹೊಣೆಗಾರಿಕೆ ಹೊತ್ತಿರುವ ಅರುಣ್ ಜೇಟ್ಲಿ ಅವರೂ ಕೂಡ ರಕ್ಷಣಾ ಇಲಾಖೆಯನ್ನು ಹೆಚ್ಚು ದಿನ ನಿಭಾಯಿಸಲಾರೆ ಎಂದು ಹೇಳುವ ಮೂಲಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಕುರಿತು ಮಾಹಿತಿ ನೀಡಿದ್ದರು. ಇದರಕ ಬೆನ್ನಲ್ಲೇ ದೆಹಲಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ.
ತಿರುಪತಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಇನ್ನು ಕೇಂದ್ರ ಸರ್ಕಾರ ಸಂಪುಟ ವಿಸ್ತರಣೆಗೆ ನಿರ್ಧರಿಸಿದೆಯಾದರೂ ಪ್ರಸ್ತುತ ಸಂಪುಟು ವಿಸ್ತರಣೆ ಕಾರ್ಯ ಸಾಧ್ಯವಿಲ್ಲ. ಕಾರಣ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರುಪತಿಗೆ ತೆರಳಿದ್ದು, ಶುಕ್ರವಾರ ಮತ್ತು ಶನಿವಾರ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ. ರಾಮನಾಥ್ ಕೋವಿಂದ್ ಅವರು ತಿರುಪತಿಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಆಸ್ಪತ್ರೆ ಕಟ್ಟಡವನ್ನು ಉದ್ಧಾಟಿಸುವ ಸಲುವಾಗಿ ತಿರುಪತಿಗೆ ತೆರಳಿದ್ದು, ಶುಕ್ರವಾರ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಅದೇ ದಿನ ಸಂಜೆ ವೆಂಕಟೇಶ್ವರ ಕಲಾ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಶನಿವಾರ ಬೆಳಗ್ಗೆ ಬಾಲಾಜಿ ದರ್ಶನ ಪಡೆದು ದೆಹಲಿಗೆ ವಾಪಸ್ ಆಗಲಿದ್ದಾರೆ.
ಹೀಗಾಗಿ ರಾಷ್ಟ್ರಪತಿಗಳು ದೆಹಲಿಗೆ ಆಗಮಿಸಿದ ಬಳಿಕ ಸಂಪುಟ ವಿಸ್ತರಣೆ ಸಾಧ್ಯ ಎಂದು ಹೇಳಲಾಗುತ್ತಿದೆ. ಹೀಗಾಗಿ ಶನಿವಾರ ಸಂಜೆ ಅಥವಾ ಭಾನುವಾರ ಬೆಳಗ್ಗೆ ಕೆಲ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ನೀಕರಿಸಲಿದ್ದಾರೆ.
ಗೋವಾ ಚುನಾವಣೆ ಹಿನ್ನಲೆಯಲ್ಲಿ ರಕ್ಷಣಾ ಖಾತೆ ಹೊಂದಿದ್ದ ಮನೋಹರ್ ಪರಿಕ್ಕರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ರಾಜ್ಯ ರಾಜಕಾರಣಕ್ಕೆ ಮರಳಿದ್ದರು. ಇನ್ನು ಉಪ ರಾಷ್ಟ್ರಪತಿ ಚುನಾವಣೆಗಾಗಿ ವೆಂಕಟಯ್ಯ ನಾಯ್ಡು ಅವರೂ ಕೂಡ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದಲ್ಲದೆ ಅತ್ತ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಬಣ ರಾಜಕೀಯ ಮರೆತು ಪ್ರಧಾನಿ ಮೋದಿ ಅವರ ಸಲಹೆಯಂತೆ ವಿಲೀನವಾಗಿದೆ. ಹೀಗಾಗಿ ಭಾನುವಾರದ ಸಚಿವ ಸಂಪುಟ ವಿಸ್ತರಣೆ ವೇಳೆ ತೆರವಾಗಿರುವ ಎರಡು ಸ್ಥಾನ ಹಾಗೂ ಹೆಚ್ಚುವರಿಯಾಗಿ ಉಳಿದಿರುವ ಸ್ಥಾನಗಳಿಗೆ ಸಚಿವರನ್ನು ನೇಮಕ ಮಾಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


