ಪ್ರಧಾನಿ ಮೋದಿ ಆಪ್ತ ಸಹಾಯಕನ ರೀತಿ ಚುನಾವಣಾ ಆಯೋಗ ವರ್ತನೆ: ಕಾಂಗ್ರೆಸ್
ಗುಜರಾತ್ ವಿಧಾನಸಭೆಗೆ ಗುರುವಾರ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನರತ್ತ ಕೈ....

Published On :
ನವದೆಹಲಿ: ಗುಜರಾತ್ ವಿಧಾನಸಭೆಗೆ ಗುರುವಾರ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನರತ್ತ ಕೈ ಬಿಸುತ್ತ ತೆರಳಿ ಮತದಾನ ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಪ್ರಧಾನಿ ಮೋದಿ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಮತದಾನದ ದಿನ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿದ್ದಾರೆ ಎಂದು ಆರೋಪಿಸಿದೆ.
ಮತದಾನದ ದಿನ ಬಿಜೆಪಿ ಮತ್ತು ಪ್ರಧಾನಿ ಮೋದಿ ಚುನಾವಣಾ ಪ್ರಚಾರ ಮಾಡುತ್ತಿದ್ದರೂ ಚುನಾವಣಾ ಆಯೋಗ ಸುಮ್ಮನೆ ಕುಳಿತಿರುವುದು ಏಕೆ? ಚುನಾವಣಾ ಆಯೋಗ ನಿದ್ದೆ ಮಾಡುತ್ತಿದ್ದೆಯೇ? ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ಕಾನೂನು ಉಲ್ಲಂಘಿಸಿರುವುದು ಆಘಾತಕಾರಿ ಎಂದಿದ್ದಾರೆ.
ಮಾಧ್ಯಮಕ್ಕೆ ಸಂದರ್ಶನ ನೀಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾತ್ರ ಚುನಾವಣಾ ಆಯೋಗ ನೋಟಿಸ್ ನೀಡಿದ್ದು ಏಕೆ? ನಿನ್ನೆ ಬಿಜೆಪಿ ನಾಯಕರು ಸಹ ಸಂದರ್ಶನ ನೀಡಿದ್ದಾರೆ. ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ರೈಲ್ವೆ ಸಚಿವರು ಸಹ ಸಂದರ್ಶನ ನೀಡಿದ್ದಾರೆ. ಆದರೆ ಅವರ ವಿರುದ್ಧ ಆಯೋಗ ಏಕೆ ನೋಟಿಸ್ ನೀಡಿಲ್ಲ? ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಗುಜರಾತ್ ಜನತೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಿತ್ತೊಗೆಯಬೇಕು ಎಂದು ಕರೆ ನೀಡಿದ್ದಾರೆ.
ಮತದಾನ ಮಾಡಿದ ನಂತರ ಪ್ರಧಾನಿ ಮೋದಿ ಅವರು ರೋಡ್ ಶೋ ನಡೆಸಿರುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದರಿಂದ ಚುನಾವಣಾ ಆಯೋಗ ಪ್ರಧಾನಿ ಒತ್ತಡದಡಿ ಕೆಲಸ ಮಾಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದು ಮತ್ತೊಬ್ಬ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ಹೇಳಿದ್ದಾರೆ.
ಚುನಾವಣಾ ಆಯೋಗ ಬಿಜೆಪಿ ಅಣತಿಯಂತೆ ಮತ್ತು ಪ್ರಧಾನಿ ಮೋದಿ ಆಪ್ತ ಸಹಾಯಕನಂತೆ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಅವರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


