ನೀತಿ ಸಂಹಿತೆ ಉಲ್ಲಂಘನೆ: ಸಾಕ್ಷಿ ಮಹಾರಾಜ್'ಗೆ ಚುನಾವಣಾ ಆಯೋಗ ಎಚ್ಚರಿಕೆ
ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಚುನಾವಣಾ ಆಯೋಗ ಗುರುವಾರ...

ನವದೆಹಲಿ: ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಚುನಾವಣಾ ಆಯೋಗ ಗುರುವಾರ ಎಚ್ಚರಿಕೆಯನ್ನು ನೀಡಿದೆ.
ಹೇಳಿಕೆ ಸಂಬಂಧ ಸಾಕ್ಷಿ ಮಹಾರಾಜ್ ಅವರಿಗೆ ಚುನಾವಣಾ ಆಯೋಗ ಪತ್ರವೊಂದನ್ನು ಬರೆದಿದೆ. ತಾವೊಬ್ಬ ಗೌರವಾನ್ವಿತ ರಾಜಕೀಯ ನಾಯಕನಾಗಿದ್ದೀರಿ. ವಿಧಾನಸಭಾ ಚುನಾವಣೆಗಳು ಹತ್ತಿರಬರುತ್ತಿದ್ದು, ಸಂಸದರಾದವರೂ ಸಾರ್ವಜನಿಕವಾಗಿ ನೀಡುವ ಹೇಳಿಕೆಗಳನ್ನು ಬಹಳ ಎಚ್ಚರಿಕೆಯಿಂದ ನೀಡಬೇಕು ಎಂದು ಹೇಳಿದೆ ಎಂದು ತಿಳಿದುಬಂದಿದೆ.
ಇದಲ್ಲದೆ, ಸಾಕ್ಷಿ ಮಹಾರಾಜ್ ಅವರಿಗೆ ಎಚ್ಚರಿಕೆಯನ್ನು ನೀಡಿರುವ ಚುನಾವಣಾ ಆಯೋಗವು, ಭವಿಷ್ಯದಲ್ಲಿ ಮತ್ತೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದೇ ಆದರೆ, ಆಯೋಗ ನಿಮ್ಮ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಎಚ್ಚರಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಸಾಕ್ಷಿ ಮಹಾರಾಜ್ ಅವರು, 4 ಪತ್ನಿಯರು, 40 ಮಕ್ಕಳು ಹಾಗೂ 3 ವಿಚ್ಛೇದನ ಎಂಬ ಪರಿಕಲ್ಪನೆಯನ್ನು ಅನುಸರಿಸುತ್ತಿರುವವರೇ ದೇಶದಲ್ಲಿ ಎದುರಾಗಿರುವ ಜನಸಂಖ್ಯಾ ಸ್ಫೋಟಕ್ಕೆ ಕಾರಣ ಎಂದು ಹೇಳಿದ್ದರು. ಹೇಳಿಕೆ ಸಂಬಂಧ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ಸಾಕ್ಷಿ ಮಹಾರಾಜ್ ಅವರು ತಮ್ಮ ಹೇಳಿಕೆ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದು, ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಬೇಕೆಂದು ನೋಟಿಸ್ ಜಾರಿ ಮಾಡಿತ್ತು.
ಈ ನೋಟಿಗೆ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಸಾಕ್ಷಿ ಮಹಾರಾಜ್ ಅವರು, ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ನಾನು ತಪ್ಪಾಗಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ನಾನು ಯಾವುದೇ ಸಮುದಾಯ ಹೆಸರನ್ನು ಉದ್ದೇಶಿಸಿ ಮಾತನಾಡಿಲ್ಲ. ಜನಸಂಖ್ಯೆಯನ್ನು ನಿಯಂತ್ರಿಸಬೇಕು, ಮಹಿಳೆಯರೇನು ಮಕ್ಕಳನ್ನು ಹೆರುವ ಯಂತ್ರಗಳಲ್ಲ ಎಂದು ಹೇಳಿದ್ದೆ. ಅದೊಂದು ಸಂತರ ಕಾರ್ಯಕ್ರಮವಾಗಿದ್ದು, ಯಾವುದೇ ರಾಜಕೀಯ ರ್ಯಾಲಿಯಾಗಿರಲಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


