ಯೋಧನ ಆರೋಪದಲ್ಲಿ ಹುರುಳಿಲ್ಲ: ಪಿಎಂಒಗೆ ಗೃಹ ಸಚಿವಾಲಯ ಮಾಹಿತಿ
ಗಡಿ ಕಾಯುವ ಯೋಧರಿಗೆ ನೀಡುವ ಆಹಾರದಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದು, ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆಂದು ಹೇಳಿಕೊಂಡಿದ್ದ ಯೋಧನ ಆರೋಪದಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ...

ನವದೆಹಲಿ: ಗಡಿ ಕಾಯುವ ಯೋಧರಿಗೆ ನೀಡುವ ಆಹಾರದಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದು, ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆಂದು ಹೇಳಿಕೊಂಡಿದ್ದ ಯೋಧನ ಆರೋಪದಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಗೃಹ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ನೀಡುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ಬಿಎಸ್ ಎಫ್ ಯೋಧರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಾಕಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯನ್ನು ಹೇಳಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು, ಅಧಿಕಾರಿಗಳ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿತ್ತು.
ಪ್ರಕರಣ ಸಂಬಂಧ ಯೋಧನ ಪತ್ನಿ ಪತಿ ತೇಜ್ ಬಹದ್ದೂರ್ ಯಾದವ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೆ, ಅಧಿಕಾರಿಗಳು ದೂರು ಹಿಂಪಡೆಯುವಂತೆ ಹಾಗೂ ಕ್ಷಮೆಯಾಚಿಸುವಂತೆ ಪತಿ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಆರೋಪ ವ್ಯಕ್ತಪಡಿಸಿದ್ದರು.
ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯ ಮಧ್ಯಪ್ರವೇಶಿಸಿ ಮಾಡಿ, ಪ್ರಕರಣ ಸಂಬಂಧ ಕೂಡಲೇ ವರದಿಸಲ್ಲಿಸುವಂತೆ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿತ್ತು.
ಇದರಂತೆ ಇಂದು ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ವರದಿ ಸಲ್ಲಿಸಿರುವ ಗೃಹ ಸಚಿವಾಲಯ, ಯೋಧನ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ. ಯೋಧರಿಗೆ ನೀಡುವ ಆಹಾರದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸುವಂತಹದ್ದೇನು ಇರಲಿಲ್ಲ. ಯೋಧರಿಗೆ ನೀಡಿರುವ ಪಡಿತರದಲ್ಲೂ ಯಾವುದೇ ರೀತಿಯ ಕೊರತೆಯಿಲ್ಲ. ಪ್ರತೀನಿತ್ಯ ಆಹಾರದ ಗುಣಮಟ್ಟತೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿಕೊಂಡಿದೆ.
ಇನ್ನು ಗೃಹ ಸಚಿವಾಲಯಕ್ಕೆ ಪ್ರಧಾನಮಂತ್ರಿಗಳ ಕಾರ್ಯಾಲಯ ಸೂಚನೆಯೊಂದನ್ನು ನೀಡಿದ್ದು, ಯೋಧರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಯೋಧರ ಪರಿಸ್ಥಿತಿ ಸುಧಾರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಿ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


