ಆತ್ಮಸಾಕ್ಷಿಗೆ ಅನುಗುಣವಾಗಿ ಯೋಚಿಸಿ ಮತ ಚಲಾಯಿಸಿ: ಮೀರಾ ಕುಮಾರ್
ರಾಷ್ಟ್ರಪತಿ ಚುನಾವಣೆ ಮತದಾನದ ವೇಳೆ ಜನಪ್ರತಿನಿಧಿಗಳು ತಮ್ಮ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿ ಎಂದು ಕಾಂಗ್ರೆಸ್ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರು ಮನವಿ ಮಾಡಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಚುನಾವಣೆ ಮತದಾನದ ವೇಳೆ ಜನಪ್ರತಿನಿಧಿಗಳು ತಮ್ಮ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿ ಎಂದು ಕಾಂಗ್ರೆಸ್ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಯುಪಿಎಯ ಹದಿನೇಳು ವಿರೋಧ ಪಕ್ಷಗಳ ಸಂಯುಕ್ತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೀರಾ ಕುಮಾರ್ ಅವರು ಭಾನುವಾರ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುವ ಜನಪ್ರತಿನಿಧಿಗಳಿಗೆ ಪತ್ರ ಬರೆದಿದ್ದು, "ಜುಲೈ 17ರಂದು ಮತದಾನ ಮಾಡುವ ಮೂಲಕ ಇತಿಹಾಸ ಸೃಷ್ಟಿಸುವ ಅಪೂರ್ವ ಅವಕಾಶ ಒದಗಿ ಬಂದಿದೆ. ಆತ್ಮಸಾಕ್ಷಿಯ ಕರೆಗೆ ಓಗೊಡುವ ಮೂಲಕ ದೇಶದ ಭವಿಷ್ಯವನ್ನು ನಿರ್ಧರಿಸಬೇಕಾದ ಕಾಲ ಬಂದಿದೆ. ಎಲ್ಲರೂ ಒಗ್ಗಟ್ಟಾಗಿ ನಿಂತು ಪವಿತ್ರವಾದ ಚುನಾವಣಾ ಪ್ರಕ್ರಿಯೆಗೆ ಬದ್ಧತೆ ತೋರೋಣ" ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ "ಇತ್ತೀಚಿನ ಕೆಲ ದಿನಗಳಿಂದ ನಡೆಯುತ್ತಿರುವ ಘಟನಾವಳಿಗಳು ಇತಿಹಾಸದಲ್ಲಿ ದಾಖಲಾಗುವಂಥದ್ದು" ಎಂದು ಮೀರಾ ತಮ್ಮ ಪತ್ರದಲ್ಲಿ ಬಣ್ಣಿಸಿದ್ದು, ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧಿ ಬಣ ಕೂಡಾ ದಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿರುವುದನ್ನು ಪರೋಕ್ಷವಾಗಿ ಅವರು ಉಲ್ಲೇಖಿಸಿದ್ದಾರೆ.
"ನನ್ನ ಸಾರ್ವಜನಿಕ ಜೀವನದಲ್ಲಿ, ಪಕ್ಷಬೇಧ ಮರೆತು ದೇಶದ ಹಿಂದಿನ ನಾಯಕರು ಹಾಕಿಕೊಟ್ಟ ಹಾದಿಯನ್ನು ಮುಂದುವರಿಸುತ್ತಾ ಬಂದಿದ್ದೇನೆ. ಎಲ್ಲ ಭಿನ್ನತೆಗಳ ನಡುವೆಯೂ ಸಾಮಾಜಿಕ ನ್ಯಾಯ ಮತ್ತು ಎಲ್ಲರ ಪಾಲ್ಗೊಳ್ಳುವಿಕೆಯ ತತ್ವವನ್ನು ಉಳಿಸಿಕೊಳ್ಳಬೇಕಾಗಿದೆ" ಎಂದು ಹೇಳಿದ್ದಾರೆ. ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ಜಾತಿಪದ್ಧತಿ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದನ್ನೂ ಮೀರಾ ಕುಮಾರ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ಅ ಮೂಲಕ ತಮ್ಮನ್ನು ಬೆಂಬಲಿಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


