ದೇಶ

ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ

21ನೇ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ...

ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ
ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ
Published On :
ಲಖನೌ: 21ನೇ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 
ಲಖನೌ ಕಾನ್ಶಿರಾಮ್ ಸ್ಮೃತಿ ಭವನದ ಎದುರು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ಉತ್ತರಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ಅವರು ಪ್ರಮಾಣವಚನ ಬೋಧಿಸಿದರು. ಈಶ್ವರ ಹೆಸರಿನಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. 
ಸಮಾರಂಭದಲ್ಲಿ ಕೇಶವ ಪ್ರಸಾದ್ ಮೌರ್ಯ ಹಾಗೂ ದಿನೇಶ್ ಶರ್ಮಾ ಅವರೂ ಕೂಡ ಉಪ ಮುಖ್ಯಮಂತ್ರಿಯಾಗಿ ಹಾಗೂ 43 ಮಂದಿ ಮಂತ್ರಿಗಳು ಪ್ರಮಾಣವಚನ ಸ್ವೀಕಾರ ಮಾಡಿದರು. 
ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ನಿತಿನ್ ಗಡ್ಕರಿ, ಮುಲಾಯಂ ಸಿಂಗ್ ಯಾದವ್, ಮುರಳಿ ಮನೋಹರ್ ಜೋಶಿ. ಎಲ್.ಕೆ. ಅಡ್ವಾಣಿ, ಗೃಹ ಸಚಿವ ರಾಜನಾಥ ಸಿಂಗ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಉಮಾ ಭಾರತಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅಖಿಲೇಶ್ ಯಾದವ್ ಸೇರಿದಂತೆ ಇನ್ನಿತರೆ ಗಣ್ಯಾತಿ ಗಣ್ಯರು ಹಾಜರಿದ್ದರು. 
ಉತ್ತರಪ್ರದೇಶ ಮುಖ್ಯಮಂತ್ರಿ ಆಯ್ಕೆ ತೀವ್ರ ಕುತೂಹಲವನ್ನು ಕೆರಳಿಸಿತ್ತು. ನಿನ್ನೆಯಷ್ಟೇ ಲಖನೌನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಶ್ಚರ್ಯಕರ ಬೆಳವಣಿಗೆಗಳು ನಡೆದಿತ್ತು. ಮಧ್ಯಾಹ್ನದವರೆಗೂ ಉತ್ತರಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಜ್ ಸಿನ್ಹಾ ಹಾಗೂ ಕೇಶವ ಪ್ರಸಾದ್ ಮೌರ್ಯ ಅವರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿತ್ತು, ಶಾಸಕಾಂಗ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. 
ಆಯ್ಕೆ ಬಳಿಕ ಕೇಂದ್ರ ಸಚಿವೆ ವೆಂಕಯ್ಯ ನಾಯ್ಡು ಅವರೊಂದಿಗೆ ಮಾತನಾಡಿದ್ದ ಯೋಗಿ ಆದಿತ್ಯನಾಥ್ ಅವರು ನನಗೆ ಇಷ್ಟು ದೊಡ್ಡ ರಾಜ್ಯ ನಿಭಾಯಿಸಲು ಇಬ್ಬರು ಉಪ ಮುಖ್ಯಮಂತ್ರಿಗಳು ಬೇಕೆಂದು ಹೇಳಿದ್ದರು. ಇದರಂತೆ ಸಭೆಯಲ್ಲಿ ಮೌರ್ಯ ಮತ್ತು ದಿಶೇಶ್ ಶರ್ಮಾ ಅವರ ಬಗ್ಗೆ ಒಮ್ಮತ ಕೂಗು ಕೇಳಿಬಂದಿತ್ತು. ಇದರಂತೆ ಕೇಶವ ಪ್ರಸಾದ್ ಮೌರ್ಯ ಹಾಗೂ ದಿನೇಶ್ ಶರ್ಮಾ ಅವರನ್ನು ಉತ್ತರಪ್ರದೇಶ ಉಪ ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿತ್ತು. 
ಯೋಗಿ ಆದಿತ್ಯನಾಥ್ ಅವರು ಉತ್ತರಾಖಂಡದ ಪಂಚೂರು ಮೂಲದವರಾಗಿದ್ದು, ಗಣಿತದಲ್ಲಿ ಪದವೀಧರರಾಗಿದ್ದಾರೆ. ಪದವಿ ಪಡೆದ ಬಳಿಕ ಅವರು ಸನ್ಯಾಸ ಸ್ವೀಕರಿಸಿ ಉತ್ತರಪ್ರದೇಶದ ನೇಪಾಳ ಗಡಿಯಲ್ಲಿರುವ ಪ್ರಭಾವಿ ಗೋರಖನಾಥ ಮಠ ಸೇರಿ ಕೊಂಡಿದ್ದರು. 2014ರಿಂದ ಆ ಮಠದ ಮುಖ್ಯಸ್ಥರೂ ಆಗಿದ್ದಾರೆ. 
ಹಿಂದೂ ಯುವ ವಾಹಿನಿ ಎಂಬ ಬಲಪಂಥೀಯ ಸಂಘಟನೆಯನ್ನು ಸ್ಫಾಪಿಸಿದ್ದ ಯೋಗಿ ಆದಿತ್ಯನಾಥ್ ಅವರು, 1998ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆಗ ಅವರು 26 ವರ್ಷದ ಅವರು 12ನೇ ಲೋಕಸಭೆಯ ಅತಿ ಕಿರಿಯ ಎನಿಸಿದ್ದರು. ಬಳಿಕ ಸತತ ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. 

ಇದೀಗ ಆದಿತ್ಯನಾಥ್ ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ದೇಶದ 2ನೇ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ. ದೇಶದಲ್ಲಿ ಹಾಲಿ ಸಿಎಂಗಳ ಪೈಕಿ 44 ವರ್ಷದ ಯೋಗಿ ಆದಿತ್ಯನಾಥ್ ಅವರು 2ನೇ ಅತಿ ಕಿರಿಯ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. 37 ವರ್ಷದ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.