ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಿದೆ...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಸಂಗ್ರಹ ಚಿತ್ರ
Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ. 
ರಜೌರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಗುಂಡು ಹಾಗೂ ಶೆಲ್ ಗಳಿಂದ ಅಪ್ರಚೋದಿತ ದಾಳಿ ನಡೆಸುತ್ತಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಷ್ ಮೆಹ್ತಾ ಅವರು ಹೇಳಿದ್ದಾರೆ. 
ಇಂದು ಬೆಳಿಕ್ಕೆ 6.45ರ ಸುಮಾರಿಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, 7 ಗ್ರಾಮಗಳನ್ನು ಗುರಿಯಾಗಿರಿಸಿಕೊಂಡು ಸಣ್ಣ ಶಸ್ತ್ರಾಸ್ತ್ರಗಳು, ಆಟೋಮೆಟಿಕ್ ಶಸ್ತ್ರಾಸ್ತ್ರಗಳು ಹಾಗೂ ಮಾರ್ಟರ್ ಶೆಲ್ ಗಳ ಮೂಲಕ ದಾಳಿ ನಡೆಸುತ್ತಿದೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಪ್ರಸ್ತುತ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. 
ನಿನ್ನೆ ಕೂಡ ಪಾಕಿಸ್ತಾನ ಸೇನೆ ರಜೌರಿಯ ನೌಶೆರಾ ಸೆಕ್ಟರ್ ಬಳಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿತ್ತು. ಈ ವೇಳೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ಅಲ್ಲದೆ, ಮೂವರು ನಾಗರಿಕರಿಗೆ ಗಂಭೀರವಾಗಿ ಗಾಯವಾಗಿತ್ತು. 
ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರೆದ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಗಡಿಯಲ್ಲಿರುವ ಶಾಲಾ-ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡುವಂತೆ ಆದೇಶ ನೀಡಿತ್ತು. 
ಪ್ರತೀನಿತ್ಯ ಪಾಕಿಸ್ತಾನ ಸೇನೆ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಗೆ 200ಕ್ಕೂ ಹೆಚ್ಚು ಮನೆಗಳು ನಾಶಗೊಂಡಿದೆ. ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರೆದ ಹಿನ್ನಲೆಯಲ್ಲಿ 1,100 ಮಹಿಳೆಯರು ಹಾಗೂ ಮಕ್ಕಳನ್ನು ರಕ್ಷಣೆ ಮಾಡಿ ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.