ದೇಶ

ತೆಲಂಗಾಣ ವಿಧಾನಸಭೆ ಮತದಾನ ಪ್ರಗತಿಯಲ್ಲಿ; ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇಕಡಾ 23ರಷ್ಟು ಮತದಾನ

ಪಂಚರಾಜ್ಯ ಚುನಾವಣೆಗಳ ಪೈಕಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ತೆಲಂಗಾಣ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ...

ತೆಲಂಗಾಣ ವಿಧಾನಸಭೆ ಮತದಾನ ಪ್ರಗತಿಯಲ್ಲಿ; ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇಕಡಾ 23ರಷ್ಟು ಮತದಾನ
ಮತ ಚಲಾವಣೆಗೆ ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ನಟರಾದ ಅಲ್ಲು ಅರ್ಜುನ ಮತ್ತು ನಾಗಾರ್ಜುನ ಹಾಗೂ ಅವರ ಪತ್ನಿ ಅಮಲಾ
Published On :

ಹೈದರಾಬಾದ್: ಪಂಚರಾಜ್ಯ ಚುನಾವಣೆಗಳ ಪೈಕಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ತೆಲಂಗಾಣ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. 

ತೆಲಂಗಾಣದಲ್ಲಿ 119 ಹಾಗೂ ರಾಜಸ್ತಾನದಲ್ಲಿ 199 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ತೆಲಂಗಾಣ ವಿಧಾನಸಭೆಯ 119 ಕ್ಷೇತ್ರಗಳಿಗೆನಡೆಯುತ್ತಿರುವ ಮತದಾನದಲ್ಲಿ ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇಕಡಾ 23ರಷ್ಟು ಮತದಾನವಾಗಿದೆ. ಇಲ್ಲಿ  1,821 ಅಭ್ಯರ್ಥಿಗಳ ಭವಿಷ್ಯ ಶುಕ್ರವಾರ ನಿರ್ಧಾರವಾಗಲಿದೆ.

ಇಂದು ಸಂಜೆ 5 ಗಂಟೆಯವರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಸುಮಾರು 2.8 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ರಾಜ್ಯದ 32,815 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯಲು ಚುನಾವಣಾ ಆಯೋಗ ಸಕಲ ಭದ್ರತಾ ಕ್ರಮ ಕೈಗೊಂಡಿದೆ.

ಇದೇ ಮೊದಲ ಬಾರಿಗೆ ತೆಲಂಗಾಣ ರಾಜ್ಯದಲ್ಲಿ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗಿದೆ. ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದ ನಂತರ ಅದಕ್ಕೆ ಜೋಡಿಸಿರುವ ವಿವಿಪ್ಯಾಟ್ ಮತದಾರರು ಆಯ್ಕೆ ಮಾಡಿದ ಅಭ್ಯರ್ಥಿಯ ಹೆಸರನ್ನು ಅವರಿಗೆ ಏಳು ಸೆಕೆಂಡ್ ಗಳ ಕಾಲ ತೋರಿಸುತ್ತದೆ. 

ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ, ಟಿಆರ್ ಎಸ್ ಮತ್ತು ಬಿಜೆಪಿ ನಡುವೆ ತ್ರಿಕೋಣ ಸ್ಪರ್ಧೆ ಏರ್ಪಟ್ಟಿದೆ. ರಾಜ್ಯದ 106 ಕ್ಷೇತ್ರಗಳಲ್ಲಿ ಸಂಜೆ 5ರವರೆಗೆ ಮತದಾನ ನಡೆಯಲಿದ್ದು ಮಾವೋವಾದಿ ಹಿಂಸೆ ಪೀಡಿತ 13 ಕ್ಷೇತ್ರಗಳಲ್ಲಿ ಮತದಾನ ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ.

ಮೊನ್ನೆ ಬುಧವಾರ ಸಂಜೆ 5 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಂಡಿತ್ತು.
ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ, ಕೆಟಿ ರಾಮ ರಾವ್, ಹರೀಶ್ ರಾವ್, ಕಾಂಗ್ರೆಸ್ ನಿಂದ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ, ರೇವಂತ್ ರೆಡ್ಡಿ ಕಣದಲ್ಲಿದ್ದಾರೆ.

ಟಾಲಿವುಡ್ ನ ಖ್ಯಾತ ನಟ ಅಲ್ಲು ಅರ್ಜುನ್ ಹೈದರಾಬಾದ್ ನ ಜ್ಯುಬಿಲಿ ಹಿಲ್ಸ್ ನಲ್ಲಿರುವ ಬೂತ್ ಸಂಖ್ಯೆ 152ಕ್ಕೆ ಆಗಮಿಸಿ ಮತ ಚಲಾಯಿಸಿದರು. ಇನ್ನೊಂದೆಡೆ ನಟ ಅಕ್ಕಿನೇನಿ ನಾಗಾರ್ಜುನ ಮತ್ತು ಅವರ ಪತ್ನಿ ನಟಿ ಅಮಲಾ ಅಕ್ಕಿನೇನಿ ಜ್ಯುಬಿಲಿ ಹಿಲ್ಸ್ ನ ಮತಗಟ್ಟೆ ಸಂಖ್ಯೆ 151ಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.

ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ, ಆನ್ ಲೈನ್ ನಲ್ಲಿ ಪರಿಶೀಲಿಸಿದಾಗ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ಕಡೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಾಣೆಯಾಗಿದೆ ಎಂದು ಮತದಾರರು ಆಕ್ರೋಶ ವ್ಯಕ್ತಪಡಿಸಿದರೆ ಇನ್ನು ಕೆಲವೆಡೆ ಮತದಾರರ ಹೆಸರು ಬೇರೆ ಮತಗಟ್ಟೆಗಳಿಗೆ ವರ್ಗಾವಣೆಯಾಗಿದೆ. ರಸೂಲ್ಪುರದಲ್ಲಿ 2014ರಲ್ಲಿ ಮತದಾನ ಮಾಡಿದವರು ಈ ಬಾರಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲ ಎಂದು ನೋವು ತೋಡಿಕೊಂಡರು.ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ, ಆನ್ ಲೈನ್ ನಲ್ಲಿ ಪರಿಶೀಲಿಸಿದಾಗ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.