ಚಿದಂಬರಂಗೆ ಮತ್ತೆ ಹಿನ್ನಡೆ: ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ...

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ್ದು, ಮಾಜಿ ಹಣಕಾಸು ಸಚಿವರಿಗೆ ಬಂಧನ ಭೀತಿ ಎದುರಾಗಿದೆ.
ನ್ಯಾಯಮೂರ್ತಿ ರಮಣ ಅವರು ತುರ್ತು ವಿಚಾರಣೆಗೆ ಸಂಬಂಧಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳುಹಿಸಿದ್ದಾರೆ. ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ಅವರು ನಿರಾಕರಿಸಿದರು.
ಮೇಲ್ಮನವಿ ವಿಚಾರಣೆ ನಡೆಯುವವರೆಗೂ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಸಿಬಲ್ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನಿನ್ನೆಯಷ್ಟೇ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅವರು ಪಲಾಯನ ಮಾಡುವ, ಸಾಕ್ಷ್ಯಗಳನ್ನು ನಾಶಮಾಡುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ ಎಂದು ಚಿದಂಬರಂ ಪರ ವಕೀಲರು ಸ್ಪಷ್ಟಪಡಿಸಿದ್ದಾರೆ.
ಚಿದಂಬರಂ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕೃರಿಸಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಬಂಧನಕ್ಕಾಗಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಮನೆಯಲ್ಲಿ ಇಲ್ಲದ ಕಾರಣ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಿ ಎಂದು ಸಿಬಿಐ ಅಧಿಕಾರಿಗಳು ಅವರ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.
ನೊಟೀಸ್‌ನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಲಾಗಿದೆ. ಇದು ಯಾವ ಕಾನೂನಿನ ನಿಬಂಧನೆ ಅಡಿ ಇದೆ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜಾಮೀನು ವಜಾಗೊಂಡ ಬೆನ್ನಲ್ಲೇ ಚಿದಂಬರಂ ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


