ದೇಶ

ಪೌರತ್ವ ಕಾಯ್ದೆ ತಡೆಗೆ 'ಸುಪ್ರೀಂ' ನಕಾರ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ

ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದಾದ್ಯಂತ ಪ್ರತಿಭಟನೆ, ಹಿಂಸಾಚಾರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಪೌರತ್ವ ಕಾಯ್ದೆ ತಡೆಗೆ 'ಸುಪ್ರೀಂ' ನಕಾರ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ
ಪೌರತ್ವ ಕಾಯ್ದೆ ವಿರುದ್ಧ ಭುಗಿಲೆದ್ದ ಹಿಂಸಾಚಾರ
Published On :

ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದೇಶದಾದ್ಯಂತ ಪ್ರತಿಭಟನೆ, ಹಿಂಸಾಚಾರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. 

ಕಾಯ್ದೆ ಪ್ರಶ್ನಿಸಿ ಈವರೆಗೂ 59 ಅರ್ಜಿಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. 

ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂಕೋರ್ಟ್, ಕಾಯ್ದೆಗೆ ತಡೆ ನೀಡಲು ನಿರಾಕರಿಸಿದೆ. ಅಲ್ಲದೆ, 2020ರ ಜನವರಿ ಎರಡನೇ ವಾರದೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಈ ಕುರಿತ ವಿಚಾರಣೆಯನ್ನು 2020ರ ಜನವರಿ 22ಕ್ಕೆ ಮುಂದೂಡಿದೆ. 

ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ  ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019. 

ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು. 

ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ. 

ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.