ಮಹಾ ಸರ್ಕಾರ ರಚನೆ: ನಾಳೆಯೇ ವಿಶ್ವಾಸಮತ ಸಾಬೀತು ಕೋರಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್, ಎನ್ ಸಿಪಿ, ಶಿವಸೇನಾ
ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಬೇಕು...

ನವದೆಹಲಿ: ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಬೇಕು ಎಂದು ಕೋರಿ ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿವೆ.
ಮೂರು ರಾಜಕೀಯ ಪಕ್ಷಗಳ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದ್ದು, ಇಂದು ರಾತ್ರಿಯೇ ವಿಚಾರಣೆ ನಡೆಸಿ, ಮಹಾರಾಷ್ಟ್ರ ರಾಜ್ಯಪಾಲರಿಗೆ ನಿರ್ದೇಶನ ನೀಡುವ ಸಾಧ್ಯತೆ ಇದೆ.
ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ನಿರ್ಧಾರ ನಿರಂಕುಶ ಮತ್ತು ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನೆ, ಅವರ ಈ ನಿರ್ಧಾರ ಸಂವಿಧಾನಬಾಹಿರ ಎಂದು ಹೇಳಿವೆ. ಅಲ್ಲದೆ ರಾಜ್ಯಪಾಲರು ದೇವೇಂದ್ರ ಫಡ್ನವಿಸ್ ಅವರು ಬಹುಮತ ಸಾಬೀತುಪಡಿಸಲು ಒಂದು ವಾರ ಕಾಲಾವಕಾಶ ನೀಡುವುದು ಕಾನೂನು ಬಾಹಿರವಾಗಿದ್ದು, ಇದು ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಹೀಗಾಗಿ 24 ಗಂಟೆಯಲ್ಲಿ ಬಹುಮತ ಸಾಬೀತಪಡಿಸುವಂತೆ ಸೂಚಿಸಬೇಕು ಎಂದು ಮೂರು ಪಕ್ಷಗಳು ಮನವಿ ಮಾಡಿವೆ.
ಬಿಜೆಪಿಗೆ ಸರ್ಕಾರ ರಚನೆಗೆ ಬೇಕಾದ ಬಹುಮತಕ್ಕೆ 40 ಸ್ಥಾನಗಳ ಕೊರತೆ ಇದ್ದರೂ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆ, ನವೆಂಬರ್ 10ರಂದು ಸರ್ಕಾರ ರಚಿಸುವಂತೆ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿತ್ತು. ಆಗ, ಬಿಜೆಪಿ ಬಹುಮತಕ್ಕೆ ಬೇಕಾದ ಸಂಖ್ಯೆ ಇಲ್ಲದ ಕಾರಣ, ಸರ್ಕಾರ ರಚನೆಯಿಂದ ಹಿಂದೆ ಸರಿದಿತ್ತು. ಸರ್ಕಾರ ರಚನೆಗೆ ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಇದ್ದರೂ, ಬಹುಮತ ಇಲ್ಲದ ಪಕ್ಷಕ್ಕೆ ರಾಜ್ಯಪಾಲರು ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಇಂದು ಬೆಳಗ್ಗೆ ದೇವೇಂದ್ರ ಫಡ್ನವಿಸ್ ಅವರು ರಾಜ್ಯದ 19 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಮುಖ್ಯಮಂತ್ರಿ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಪ್ರಮಾಣವಚನ ಬೋಧಿಸಿದ್ದರು.
ಈ ಮೊದಲು ಶಿವಸೇನೆ, ಕಾಂಗ್ರೆಸ್, ಎನ್ ಸಿ ಪಿ ಮೈತ್ರಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿತ್ತು. ಇದಕ್ಕಾಗಿ ಎಲ್ಲಾ ಮಾತುಕತೆ, ವೇದಿಕೆ ಕೂಡ ಸಿದ್ಧವಾಗಿತ್ತು. ಇನ್ನೇನು ರಾಜ್ಯಪಾಲರನ್ನು ಭೇಟಿ ಮಾಡಿ ಅನುಮತಿ ಪಡೆದು ಹೊಸ ಸರ್ಕಾರ ರಚನೆಯ ಉಮೇದಿನಲ್ಲಿದ್ದ ಉದ್ಧವ ಠಾಕ್ರೆ ಅವರಿಗೆ ಈ ಬೆಳವಣಿಗೆ ಅತ್ಯಂತ ನಿರಾಸೆ ತಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


