ಆಂಧ್ರ ಪ್ರದೇಶ: ಜಗನ್ ಸರ್ಕಾರಕ್ಕೆ ಮುಖಭಂಗ, ವೈಎಸ್‌ಆರ್ ಕಾಂಗ್ರೆಸ್ ನಾಯಕರ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಪ್ರಮುಖ ಬೆಳವಣಿಗೆಯಲ್ಲಿ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದ್ದು, ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ನಾಯಕರ ವಿರುದ್ಧ ಸಿಬಿಐ ತನಿಖೆಗೆ ಆಂಧ್ರ ಹೈಕೋರ್ಟ್ ಆದೇಶ ನೀಡಿದೆ.

ಅಮರಾವತಿ: ಪ್ರಮುಖ ಬೆಳವಣಿಗೆಯಲ್ಲಿ ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದ್ದು, ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ನಾಯಕರ ವಿರುದ್ಧ ಸಿಬಿಐ ತನಿಖೆಗೆ ಆಂಧ್ರ ಹೈಕೋರ್ಟ್ ಆದೇಶ ನೀಡಿದೆ.
ವೈಎಸ್‌ಆರ್ ಕಾಂಗ್ರೆಸ್ ನಾಯಕರು ಕೆಲವು ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಸಿಬಿಐಗೆ ವಹಿಸಿ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸುತ್ತಿರುವ ತನಿಖೆಯ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.ವೈಎಸ್‌ಆರ್ ಕಾಂಗ್ರೆಸ್ ನಾಯಕರನ್ನು ರಕ್ಷಿಸುವ ಸಲುವಾಗಿಯೇ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಲ್ಲ ಎಂದು ಹೇಳಿದೆ. ಸಿಬಿಐ ತನಿಖೆಗೆ ಸಹಕರಿಸುವಂತೆ ರಾಜ್ಯ ಸರ್ಕಾರಕ್ಕೂ ಸೂಚಿಸಲಾಗಿದೆ.
ಈ ಹೈವೋಲ್ಟೇಜ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಕೇಶ್ ಕುಮಾರ್ ಮತ್ತು ಜೆ.ಉಮಾದೇವಿ ಅವರನ್ನೊಳಗೊಂಡ ಪೀಠವು, 'ಎಫ್‌ಐಆರ್ ದಾಖಲಿಸುವಂತೆ ಸಿಬಿಐಗೆ ಸೂಚಿಸಿದೆ. ಅಲ್ಲದೆ 8 ವಾರಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ರಾಜ್ಯ ಸರ್ಕಾರದ ವಿರುದ್ಧ ಕೆಲವು ತೀರ್ಪುಗಳನ್ನು ನೀಡಿದ ಬಳಿಕ ವೈಎಸ್‌ಆರ್ ಕಾಂಗ್ರೆಸ್‌ನ ಕೆಲವು ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಸಿಐಡಿಗೆ ದೂರು ನೀಡಿದ್ದಲ್ಲದೆ 9 ಮಂದಿಯ ಹೆಸರು ಮತ್ತು ಸಾಕ್ಷಿಯನ್ನೂ ನೀಡಿದ್ದರು. ವಿಧಾನಸಭೆ ಸ್ಪೀಕರ್ ತಮ್ಮಿನೇನಿ ಸೀತಾರಾಮ್, ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ, ಸಂಸದರಾದ ವಿ.ವಿಜಯಸಾಯಿ ರೆಡ್ಡಿ, ನಂದಿಗಾಂ ಸುರೇಶ್, ಮಾಜಿ ಶಾಸಕ ಎ.ಕೃಷ್ಣಮೋಹನ್ ಮತ್ತು ಇತರ ನಾಯಕರು ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಇವರ ವಿರುದ್ಧ ಸಿಐಡಿ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದೆ.
'ವೈಎಸ್ ಆರ್ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮತ್ತು ನ್ಯಾಯಾಂಗದ ಮೇಲಿನ ಆಕ್ರಮಣಕ್ಕೆ ಸಮನಾಗಿವೆ. ಕೆಲವು ಸಾಮಾನ್ಯ ವ್ಯಕ್ತಿಗಳು ಸರ್ಕಾರದ ವಿರುದ್ಧ ಯಾವುದೇ ಪ್ರತಿಕ್ರಿಯೆ ನೀಡಿದರೆ, ಅಂತಹ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ಕೂಡಲೇ ದಾಖಲಿಸಲಾಗುತ್ತದೆ. ಆದರೆ ಪ್ರಮುಖ ಸ್ಥಾನಗಳಲ್ಲಿರುವ ವ್ಯಕ್ತಿಗಳು ನ್ಯಾಯಾಧೀಶರು ಮತ್ತು ನ್ಯಾಯಾಂಗದ ವಿರುದ್ಧ ಕಾಮೆಂಟ್ ಮಾಡಿದಾಗ, ಏಕೆ ಪ್ರಕರಣಗಳನ್ನು ದಾಖಲಿಸಲಾಗಿಲ್ಲ? ಎಂದು ನ್ಯಾಯಪೀಠ ಕಳೆದ ವಾರ ವಿಚಾರಣೆಯ ಸಂದರ್ಭದಲ್ಲಿ ಮೌಖಿಕವಾಗಿ ಪ್ರತಿಕ್ರಿಯಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


