ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಂಭವ: ಆಗಸ್ಟ್ ನಲ್ಲಿ ದೇಶದಲ್ಲಿ ದಾಖಲೆ ಮಳೆ
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದಹಲಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್-೧ ರಿಂದ ಆಗಸ್ಟ್ ೩೧ರ ಅವಧಿಯಲ್ಲಿ ದೇಶದಲ್ಲಿ ಒಟ್ಟಾರೆ ಶೇ. ೧೦ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಆಗಸ್ಟ್‌ನಲ್ಲಿ ವಾಡಿಕೆಗಿಂತ ಶೇಕಡ ೨೭ರಷ್ಟು ಹೆಚ್ಚು ಮಳೆಯಾಗಿದೆ. ಈ ಮೂಲಕ ೪೪ ವರ್ಷಗಳ ದಾಖಲೆಯನ್ನು ಆಗಸ್ಟ್ ಮಳೆ ಮುರಿದಿದೆ.
ಕಳೆದ ೧೨೦ ವರ್ಷಗಳಲ್ಲಿ ೪ನೇ ಬಾರಿಗೆ ಆಗಸ್ಟ್‌ನಲ್ಲಿ ಅತಿ ಹೆಚ್ಚು ಮಳೆಯಾಗಿರುವುದು ವಿಶೇಷವಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ೩ ದಿನಗಳ ಕಾಲ ಉತ್ತರ ಭಾರತ, ಈಶಾನ್ಯ ರಾಜ್ಯಗಳು ಹಾಗೂ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಂಭವವಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್‌ನಲ್ಲಿ ಇಷ್ಟೊಂದು ಮಳೆ ಬಿದ್ದಿರುವುದು 1976ರ ಬಳಿಕ ಇದೇ ಮೊದಲು ಎಂದು ಇಲಾಖೆ ಹೇಳಿದೆ. ಜುಲೈ ತಿಂಗಳಲ್ಲಿ ಸರಾಸರಿಗಿಂತ ಶೇ.10ರಷ್ಟು ಕಡಿಮೆ ಮಳೆಯಾಗಿತ್ತು. ಆದರೆ, ಆಗಸ್ಟ್‌ನಲ್ಲಿ ದೇಶಾದ್ಯಂತ ಉತ್ತಮ ಮಳೆಯಾದ ಕಾರಣ, ಈ ದಾಖಲೆ ಸೃಷ್ಟಿಯಾಗಿದೆ. ಸೆಪ್ಟಂಬರ್‌ನಲ್ಲಿ ವರುಣನ ಅಬ್ಬರ ತಗ್ಗಲಿದೆ ಎಂದೂ ಇಲಾಖೆ ಹೇಳಿದೆ.
ಕಳೆದ ಎರಡು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಬೆಂಗಳೂರು, ರಾಮನಗರ, ಚಾಮರಾಜನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆ.5ರ ವರೆಗೂ ಕರಾವಳಿ, ದಕ್ಷಿಣ ಒಳನಾಡಿನ ಹಾಗೂ ರಾಜ್ಯದ ಪೂರ್ವಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್. ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


