ತಮಿಳುನಾಡು: ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೇ.7.5 ಮೀಸಲಾತಿ ಒದಗಿಸುವ ಮಸೂದೆ ವಿಧಾನಸಭೆಯಲ್ಲಿ ಮಂಡನೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಶೇ. 7.5ಮೀಸಲಾತಿ ಒದಗಿಸುವ ಮಸೂದೆ ಮಂಡಿಸಿದರು.
ಈ ತಿಂಗಳ ಆರಂಭದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮೀಸಲಾತಿ ಒದಗಿಸುವ ನಿರ್ಧಾರವನ್ನು ಘೋಷಿಸಿದ್ದರು ಮತ್ತು ಮುಂದಿನ ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಹೇಳಿದ್ದರು.
ಇಂದು ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಸ್ಟಾಲಿನ್, ಬಡ ಕುಟುಂಬದ ಹಿನ್ನೆಲೆ ಮತ್ತು ತಿಳುವಳಿಕೆ ಕೊರತೆಯಿಂದಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದು ತುಂಬಾ ಕಡಿಮೆ ಎಂದು ಹೇಳಿದರು.
2006 ರಲ್ಲಿ ಅಂದಿನ ಡಿಎಂಕೆ ಸರ್ಕಾರ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಹೇಗೆ ರದ್ದುಗೊಳಿಸಿತು ಎಂಬುದನ್ನು ಸ್ಟಾಲಿನ್ ಇದೇ ವೇಳೆ ನೆನಪಿಸಿಕೊಂಡರು.
"ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅನೇಕ ತೊಂದರೆಗಳಿವೆ. ಅವರು ಖಾಸಗಿ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕು" ಎಂದು ಸ್ಟಾಲಿನ್ ಹೇಳಿದರು.
ವಿರೋಧ ಪಕ್ಷ ಎಐಎಡಿಎಂಕೆಯ ಸದಸ್ಯರು ಕೂಡ ಈ ಮಸೂದೆಯನ್ನು ಸ್ವಾಗತಿಸಿದರು. ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ತಮ್ಮ ಪಕ್ಷವು ಮಸೂದೆಯನ್ನು ಸ್ವಾಗತಿಸುತ್ತದೆ ಎಂದು ಹೇಳಿದರು.
ಈ ವಿಧೇಯಕವನ್ನು ಸದನದಲ್ಲಿ ಸರ್ವಾನುಮತದಿಂದ ಅಂಗೀಕರಿಸುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


