ದೇಶ

ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಅರ್ಜಿ: ಡಿಸೆಂಬರ್ 13 ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ

2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನು ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 13 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಅರ್ಜಿ: ಡಿಸೆಂಬರ್ 13 ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ
ಸುಪ್ರೀಂ ಕೋರ್ಟ್
Published On :

ನವದೆಹಲಿ: 2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನು ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 13 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಗುಜರಾತ್‌ನ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅ‌ನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು. ಸರ್ಕಾರದ ಈ ಕ್ರಮಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. 11 ಜನ ಅಪರಾಧಿಗಳು 15 ವರ್ಷಗಳಿಗೂ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಅಜಯ್ ರಸ್ತೋಗಿ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ವಿಚಾರಣೆ ನಡೆಸಲಿದೆ.

ಬಿಲ್ಕಿಸ್ ಬಾನು ಅವರು 20 ವರ್ಷದವರಾಗಿದ್ದಾಗ ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಗುಂಪೊಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಿಲ್ಕಿಸ್ ಬಾನು ಅವರು ಆಗ 5 ತಿಂಗಳ ಗರ್ಭಿಣಿಯಾಗಿದ್ದರು.

ಬಿಲ್ಕಿಸ್ ತಮ್ಮ ರಿಟ್ ಅರ್ಜಿಯಲ್ಲಿ, ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ, ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು 'ಯಾಂತ್ರಿಕ' ಎಂದು ಬಣ್ಣಿಸಿದ್ದಾರೆ.

ಮನವಿಗಳ ಹೊರತಾಗಿಯೂ ಅಪರಾಧಿಗಳ ಅವಧಿಪೂರ್ವ ಬಿಡುಗಡೆಯ ಆದೇಶವನ್ನು ತನ್ನೊಂದಿಗೆ ಹಂಚಿಕೊಂಡಿಲ್ಲ ಎಂದು ಅರ್ಜಿಯಲ್ಲಿ ದೂರಿದ್ದಾರೆ.

'ದೇಶವು ತನ್ನ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ, ಎಲ್ಲಾ ಅಪರಾಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆ ಮಾಡಲಾಯಿತು ಮತ್ತು ಸಾರ್ವಜನಿಕವಾಗಿ ಹಾರ ಹಾಕಿ ಗೌರವಿಸಲಾಯಿತು ಮತ್ತು ಸಿಹಿ ಹಂಚಲಾಯಿತು. ಈ ದೇಶ ಕಂಡ ಅತ್ಯಂತ ಘೋರ ಅಪರಾಧದ ಎಲ್ಲಾ ಅಪರಾಧಿಗಳ ಅವಧಿಪೂರ್ವ ಬಿಡುಗಡೆಯ ಬಗ್ಗೆ ಇಡೀ ದೇಶ ಮತ್ತು ಪ್ರಪಂಚಕ್ಕೆ ಆಘಾತಕಾರಿ ವಿಚಾರವೊಂದನ್ನು ತಿಳಿಸಲಾಯಿತು ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಬಿಲ್ಕಿಸ್ ಬಾನು ಹೊರತಾಗಿ, ಸುಭಾಷಿಣಿ ಅಲಿ ಸೇರಿದಂತೆ ಮಹಿಳಾ ಹಕ್ಕುಗಳ ಹೋರಾಟಗಾರರು ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಮೇ 13ರಂದು ನೀಡಿದ ಸುಪ್ರೀಂ ಕೋರ್ಟ್‌ನ ಆದೇಶವನ್ನು ಪರಿಶೀಲಿಸಲು ಬಿಲ್ಕಿಸ್ ಕೋರಿದ್ದಾರೆ. ಇದರಲ್ಲಿ ಅವರಲ್ಲಿ ಒಬ್ಬರು ಅವಧಿಪೂರ್ವ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. 1992ರ ಕ್ಷಮಾದಾನ ನೀತಿ ಅಡಿಯಲ್ಲಿ ಎರಡು ತಿಂಗಳೊಳಗೆ ಅಪರಾಧಿಗಳ ಶಿಕ್ಷೆ ಹಿಂತೆಗೆದುಕೊಳ್ಳುವ ವಿಚಾರವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 1992 ರ ನೀತಿಯು ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಅಥವಾ ಕೊಲೆ ಅಪರಾಧಿಗಳ ಶಿಕ್ಷೆ ಹಿಂತೆಗೆದುಕೊಳ್ಳುವ ವಿಚಾರವನ್ನು ನಿಷೇಧಿಸಲಿಲ್ಲ. ಪರಿಶೀಲನಾ ಅರ್ಜಿ ಇನ್ನೂ ಬಾಕಿ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.